
ಬಾಗಲಕೋಟೆ, 23 ಜೂನ್ (ಹಿ.ಸ.) :
ಆಂಕರ್ : ಮಾದಕ ವಸ್ತುಗಳ ಸೇವನೆ, ಬಳಕೆ ಹಾಗೂ ಅಕ್ರಮ ಮಾರಾಟ ತಡೆಗಟ್ಟುವ ಉದ್ದೇಶದಿಂದ ಬಾಗಲಕೋಟ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಬಾದಾಮಿ ಪೊಲೀಸ್ ಠಾಣೆ ವತಿಯಿಂದ ಬಾದಾಮಿ ನಗರದ ಶ್ರೀ ವೀರಪುಲೀಕೇಶಿ ಗ್ರಾಮೀಣ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು. ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯದ ಮೇಲೆ ಮಾತ್ರವಲ್ಲದೆ, ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಗಣ್ಯರು ಹಾಗೂ ಅಧಿಕಾರಿಗಳು ತಿಳಿಸಿದರು.
ಯುವಕರು ಮತ್ತು ವಿದ್ಯಾರ್ಥಿಗಳು ಮಾದಕ ವಸ್ತುಗಳ ಆಮಿಷಕ್ಕೆ ಒಳಗಾಗದೆ ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಉತ್ತಮ ಆರೋಗ್ಯ ಹಾಗೂ ಉಜ್ವಲ ಭವಿಷ್ಯಕ್ಕಾಗಿ ಮಾದಕ ವಸ್ತುಗಳಿಂದ ದೂರ ಉಳಿಯುವಂತೆ ಕರೆ ನೀಡಲಾಯಿತು.
ಮಾದಕ ವಸ್ತುಗಳ ಅಕ್ರಮ ಮಾರಾಟ, ಸಾಗಾಟ ಅಥವಾ ಬಳಕೆ ಕಂಡುಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande