
ವಿಜಯಪುರ, 23 ಜೂನ್ (ಹಿ.ಸ.) :
ಆಂಕರ್ : ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಹಾಗೂ ಜನಸೇವೆಯಲ್ಲಿ ವಿಶಿಷ್ಟ ಸಾಧನೆ ಮಾಡಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ DG & IGP Medal Commendation Disc–2025-26 ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಸೇರಿದಂತೆ ಒಟ್ಟು ಐವರು ಅಧಿಕಾರಿ ಹಾಗೂ ಸಿಬ್ಬಂದಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಾನ್ಯ ಡಿಜಿ & ಐಜಿಪಿ ಬೆಂಗಳೂರು ಅವರಿಂದ ನೀಡಲಾಗುವ ಈ ಗೌರವವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ, ವಿಶೇಷ ಕಾರ್ಯಕ್ಷಮತೆ ಹಾಗೂ ಕರ್ತವ್ಯ ಬದ್ಧತೆಗೆ ನೀಡುವ ಮಹತ್ವದ ಮಾನ್ಯತೆಯಾಗಿದೆ.
ವಿಜಯಪುರ ಜಿಲ್ಲೆಯ ಪೊಲೀಸ್ ಅಧೀಕ್ಷಕರೊಂದಿಗೆ ಇನ್ನೂ ನಾಲ್ವರು ಅಧಿಕಾರಿ ಹಾಗೂ ಸಿಬ್ಬಂದಿಯವರು ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದು, ಜಿಲ್ಲೆಯ ಪೊಲೀಸ್ ಇಲಾಖೆಗೆ ಹೆಮ್ಮೆ ತಂದಿದ್ದಾರೆ.
ಪ್ರಶಸ್ತಿ ಪಡೆದ ಅಧಿಕಾರಿ ಮತ್ತು ಸಿಬ್ಬಂದಿಯವರ ಸೇವೆಯನ್ನು ಗುರುತಿಸಿ ವಿಜಯಪುರ ಜಿಲ್ಲಾ ಪೊಲೀಸ್ ವತಿಯಿಂದ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಜನರ ಸುರಕ್ಷತೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಪೊಲೀಸ್ ಇಲಾಖೆಯ ಗೌರವವನ್ನು ಹೆಚ್ಚಿಸುವಲ್ಲಿ ಇವರ ಸೇವೆ ಮಾದರಿಯಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande