ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಜಾಗೃತಿ ಜಾಥಾ
ಹಾಕುತ್ತ
ಜಾಗೃತಿ ಜಾಥಾ


ಹುಬ್ಬಳ್ಳಿ, 24 ಜೂನ್ (ಹಿ.ಸ.) :

ಆ್ಯಂಕರ್ : ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯಲ್ಲಿ ಬುಧವಾರ ಬೃಹತ್ ಜಾಗೃತಿ ಜಾಥಾ ಯಶಸ್ವಿಯಾಗಿ ನಡೆಯಿತು.

ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಾಗೂ ಅಕ್ರಮ ಸಾಗಣೆಯನ್ನು ತಡೆಗಟ್ಟುವ ಉದ್ದೇಶದಿಂದ ಆಯೋಜಿಸಲಾದ ಈ ಜಾಥಾದಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದರು.

ಜಿಲ್ಲಾಧಿಕಾರಿ ಆರ್. ಸ್ನೇಹಲ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ , ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ , ಉಪ ಪೊಲೀಸ್ ಆಯುಕ್ತೆ ಶ್ರುತಿ ಎನ್.ಎಸ್. , ಸಹಾಯಕ ಪೊಲೀಸ್ ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ಹಾಗೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಗೋವಾ ವಲಯದ ಅಧಿಕಾರಿಗಳ ಸಂಯುಕ್ತ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಎಲ್ಲ ಔಷಧಶಾಸ್ತ್ರ ಮಹಾವಿದ್ಯಾಲಯಗಳು ಹಾಗೂ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಷನ್ ಸಹಯೋಗದಲ್ಲಿ ನಡೆದ ಜಾಥಾವು ಬೆಳಿಗ್ಗೆ 8 ಗಂಟೆಗೆ ವಿದ್ಯಾನಗರದ ತೋಳಂಕರೆ ಪ್ರದೇಶದಿಂದ ಆರಂಭವಾಗಿ, ಹುಬ್ಬಳ್ಳಿಯ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಸಮಾರೋಪಗೊಂಡಿತು.

ಜಾಥಾದಲ್ಲಿ ವಿವಿಧ ಔಷಧಶಾಸ್ತ್ರ ಕಾಲೇಜುಗಳ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಆರೋಗ್ಯ ವೃತ್ತಿಪರರು, ಔಷಧ ವ್ಯಾಪಾರಿಗಳು, ಔಷಧ ನಿರೀಕ್ಷಕರು, ಪೊಲೀಸ್ ಅಧಿಕಾರಿಗಳು, ಸರ್ಕಾರಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಭಾಗವಹಿಸಿದವರು ಮಾದಕ ದ್ರವ್ಯ ವಿರೋಧಿ ಘೋಷಣೆಗಳನ್ನು ಹಾಕುತ್ತ, ಜಾಗೃತಿ ಫಲಕಗಳನ್ನು ಪ್ರದರ್ಶಿಸುವ ಮೂಲಕ ಸಮಾಜಕ್ಕೆ ಬಲವಾದ ಸಂದೇಶ ರವಾನಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ, ಜಾಗೃತಿ, ಆರಂಭಿಕ ಹಂತದಲ್ಲಿಯೇ ತಡೆಗಟ್ಟುವಿಕೆ, ಚಿಕಿತ್ಸೆ, ಪುನರ್ವಸತಿ ಹಾಗೂ ಸಮುದಾಯದ ಸಕ್ರಿಯ ಸಹಭಾಗಿತ್ವದ ಮೂಲಕ ಮಾದಕ ವ್ಯಸನವನ್ನು ನಿಯಂತ್ರಿಸುವ ಅಗತ್ಯವನ್ನು ಒತ್ತಿಹೇಳಲಾಯಿತು. ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣದಲ್ಲಿ ನಾಗರಿಕರು, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಇಲಾಖೆ ಹಾಗೂ ಕಾನೂನು ಜಾರಿ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮವು ಕೇಂದ್ರ ಸರ್ಕಾರದ “ನಶಾ ಮುಕ್ತ ಭಾರತ ಅಭಿಯಾನ – ವಿಕಸಿತ ಭಾರತದ ಗುರುತು” ಎಂಬ ಧ್ಯೇಯವಾಕ್ಯವನ್ನು ಪುನರುಚ್ಚರಿಸಿತು. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಆರೋಗ್ಯ ವೃತ್ತಿಪರರು ಹಾಗೂ ಸಾರ್ವಜನಿಕರು ನಶಾ ಮುಕ್ತ ಭಾರತ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಕರೆ ನೀಡಲಾಯಿತು.

ಮಾದಕ ವ್ಯಸನಕ್ಕೆ ಸಂಬಂಧಿಸಿದ ಮಾಹಿತಿ, ಸಮಾಲೋಚನೆ ಮತ್ತು ನೆರವಿಗಾಗಿ ಮಾನಸ ಮಾದಕ ದ್ರವ್ಯ ಸಹಾಯವಾಣಿ – 1933 ಅನ್ನು ಬಳಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಯಿತು.

ಕಾರ್ಯಕ್ರಮದ ಅಂತ್ಯದಲ್ಲಿ ಎಲ್ಲ ಭಾಗವಹಿಸಿದವರು “ಮಾದಕ ದ್ರವ್ಯ ಮುಕ್ತ ಭಾರತ” ನಿರ್ಮಾಣಕ್ಕೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತಾ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಈ ಮೂಲಕ ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದ ಸಂದೇಶವನ್ನು ಕಾರ್ಯಕ್ರಮ ಯಶಸ್ವಿಯಾಗಿ ಸಾರಿತು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande