
ಹುಬ್ಬಳ್ಳಿ, 25 ಜೂನ್ (ಹಿ.ಸ.):
ಆ್ಯಂಕರ್:
ಹುಬ್ಬಳ್ಳಿಯ ಬಾಬು ಜಗಜೀವನ್ ರಾಮ್ ಸಮುದಾಯ ಭವನದಲ್ಲಿ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಆಯೋಜಿಸಿದ್ದ ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಜನಜಾಗೃತಿ ಕಾರ್ಯಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾನದ ಹಕ್ಕು ಪ್ರಜಾಪ್ರಭುತ್ವದ ಆತ್ಮವಾಗಿದ್ದು, ಎಸ್ಐಆರ್ ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಅಪಾಯಕಾರಿ ಪ್ರಕ್ರಿಯೆ ನಡೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ದಾಖಲೆಗಳ ಹೆಸರಿನಲ್ಲಿ ಬಡವರು, ಕಾರ್ಮಿಕರು, ದಲಿತರು, ಆದಿವಾಸಿಗಳು, ಅಲೆಮಾರಿ ಹಾಗೂ ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ಸಹಿಸಲಾಗುವುದಿಲ್ಲ ಎಂದು ಅವರು ಹೇಳಿದರು.
ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ನೀಡಿರುವ ಮತದಾನದ ಹಕ್ಕು ಅತ್ಯಂತ ಅಮೂಲ್ಯವಾದದ್ದು. ಈ ಹಕ್ಕನ್ನು ರಕ್ಷಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದ್ದು, ಜನಜಾಗೃತಿ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಲು ಎಲ್ಲರೂ ಮುಂದಾಗಬೇಕು ಎಂದು ಕರೆ ನೀಡಿದರು.
ಮತದಾರರ ಹಕ್ಕುಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದ್ದು, ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ನಾಗರಿಕರ ಹೆಸರು ಅನಗತ್ಯವಾಗಿ ಕೈಬಿಡದಂತೆ ಎಚ್ಚರಿಕೆ ವಹಿಸಬೇಕೆಂದು ಅವರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.