
ಬಾಗಲಕೋಟೆ, 25 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ದಶಕಗಳ ಜ್ವಲಂತ ಸಮಸ್ಯೆಯಾಗಿರುವ ಮುಳುಗಡೆ ಸಂತ್ರಸ್ಥರ ಪುನರ್ವಸತಿ ಹಾಗೂ ಪರಿಹಾರ ವಿಚಾರಗಳಿಗೆ ಸರ್ಕಾರದ ಮಟ್ಟದಲ್ಲಿ ಹೆಚ್ಚಿನ ಆದ್ಯತೆ ದೊರೆಯಬೇಕಿದ್ದು, ಈ ನಿಟ್ಟಿನಲ್ಲಿ ಸದನದಲ್ಲಿ ಬಲವಾಗಿ ಧ್ವನಿ ಎತ್ತಲು ಜಿಲ್ಲೆಯವರಿಗೆ ಹೆಚ್ಚಿನ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಚಂದ್ರಶೇಖರ ರಾಠೋಡ ಒತ್ತಾಯಿಸಿದ್ದಾರೆ.
ಮುಳುಗಡೆ ಪ್ರದೇಶಗಳ ಜನರು ಹಲವು ವರ್ಷಗಳಿಂದ ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದು, ಅವರ ಸಮಸ್ಯೆಗಳ ಪರಿಹಾರಕ್ಕೆ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಜಿಲ್ಲೆಯ ಜನರ ನೋವು, ಸಂಕಷ್ಟ ಹಾಗೂ ಅಭಿವೃದ್ಧಿ ವಿಚಾರಗಳನ್ನು ಸರ್ಕಾರದ ಗಮನಕ್ಕೆ ತರುವ ಸಾಮರ್ಥ್ಯ ಹೊಂದಿರುವ ನಾಯಕರಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕು ಎಂದು ಅವರು ಹೇಳಿದರು.
ಬಾಗಲಕೋಟೆ ಜಿಲ್ಲೆಯು ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಂದಾಗಿ ಭೂಮಿ, ಮನೆ ಹಾಗೂ ಜೀವನಾಧಾರ ಕಳೆದುಕೊಂಡ ಸಾವಿರಾರು ಸಂತ್ರಸ್ಥರನ್ನು ಹೊಂದಿದೆ. ಪುನರ್ವಸತಿ ಕೇಂದ್ರಗಳಲ್ಲಿನ ಮೂಲಸೌಕರ್ಯ, ಪರಿಹಾರ ವಿತರಣೆ, ಭೂಮಿ ಹಂಚಿಕೆ ಸೇರಿದಂತೆ ಹಲವು ಸಮಸ್ಯೆಗಳು ಇನ್ನೂ ಬಗೆಹರಿಯಬೇಕಿವೆ ಎಂದು ಅವರು ತಿಳಿಸಿದರು.
ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರದ ಮಟ್ಟದಲ್ಲಿ ಪ್ರಬಲ ಪ್ರತಿನಿಧಿತ್ವ ಅಗತ್ಯವಾಗಿದೆ. ಕಾಂಗ್ರೆಸ್ ಪಕ್ಷವು ಬಾಗಲಕೋಟೆ ಜಿಲ್ಲೆಯ ಮೇಲಿನ ತನ್ನ ವಿಶೇಷ ಕಾಳಜಿಯನ್ನು ತೋರಿಸಿ ಹೆಚ್ಚಿನ ಸಚಿವ ಸ್ಥಾನ ನೀಡಿದರೆ, ಜಿಲ್ಲೆಯ ಅಭಿವೃದ್ಧಿ ಹಾಗೂ ಸಂತ್ರಸ್ಥರ ಹಿತಾಸಕ್ತಿಗಾಗಿ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗಲಿದೆ ಎಂದು ಚಂದ್ರಶೇಖರ ರಾಠೋಡ ಮನವಿ ಮಾಡಿದರು.
ಮುಳುಗಡೆ ಸಂತ್ರಸ್ಥರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯುವವರೆಗೆ ಹೋರಾಟ ಮುಂದುವರಿಸಲಾಗುವುದು. ಜಿಲ್ಲೆಯ ಜನರ ಆಶೋತ್ತರಗಳಿಗೆ ಸ್ಪಂದಿಸುವ ನಾಯಕರಿಗೆ ಅವಕಾಶ ನೀಡುವ ಮೂಲಕ ಸರ್ಕಾರ ಜನಪರ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande