
ಬಾಗಲಕೋಟೆ, 25 ಜೂನ್ (ಹಿ.ಸ.) :
ಆಂಕರ್ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರು, ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ಪಡೆದು, ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿದ ಅವರು, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಹೇಳಿದರು. ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ದತ್ತಾಂಶ, ಫಲಾನುಭವಿಗಳ ವಿವರ ಹಾಗೂ ಪ್ರಸ್ತುತ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಜನಸಾಮಾನ್ಯರ ಜೀವನಮಟ್ಟ ಸುಧಾರಿಸುವ ಉದ್ದೇಶ ಹೊಂದಿದ್ದು, ಅವುಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಎಚ್.ಎಂ. ರೇವಣ್ಣ ಸೂಚಿಸಿದರು.
ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಯಾವುದೇ ರೀತಿಯ ವಿಳಂಬ ಅಥವಾ ಅಸಡ್ಡೆಯನ್ನು ಸಹಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯ ಆಡಳಿತದ ಪ್ರತಿನಿಧಿಗಳು ಭಾಗವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಪ್ರಗತಿ, ಸಮಸ್ಯೆಗಳು ಹಾಗೂ ಪರಿಹಾರ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande