
ವಿಜಯಪುರ, 25 ಜೂನ್ (ಹಿ.ಸ.) :
ಆಂಕರ್ : ರಾಜ್ಯದಲ್ಲಿ ಮಳೆ ಅಭಾವದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಜುಲೈ ಎರಡನೇ ವಾರದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂಬ ಆಶಾಭಾವನೆ ಇದೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಸಚಿವರು, ಪ್ರಸ್ತುತ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ರೈತರು ಆತಂಕಕ್ಕೊಳಗಾಗಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಹೇಳಿದರು.
ಕೃತಕ ಮಳೆ ಪ್ರಯೋಗ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ವಿಚಾರವನ್ನು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು. ಬಳಿಕ ಹವಾಮಾನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾಜ್ಯದ ಯಾವ ಭಾಗಗಳಲ್ಲಿ ಮಳೆ ಕೊರತೆ ಹಾಗೂ ನೀರಿನ ಅಭಾವ ಹೆಚ್ಚಿದೆ ಎಂಬುದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಮಳೆ ಕೊರತೆ ಇರುವ ಪ್ರದೇಶಗಳಲ್ಲಿ ಮೋಡ ಬಿತ್ತನೆ ನಡೆಸುವ ಅಗತ್ಯತೆ, ಸಾಧ್ಯತೆ ಹಾಗೂ ಪರಿಣಾಮಗಳ ಬಗ್ಗೆ ತಜ್ಞರ ಸಲಹೆ ಪಡೆದು ಗಂಭೀರ ಚರ್ಚೆ ನಡೆಸಿದ ನಂತರ ಮುಖ್ಯಮಂತ್ರಿ ಅವರ ಮಾರ್ಗದರ್ಶನದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.
ರೈತರ ಹಿತದೃಷ್ಟಿಯಿಂದ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಮಳೆ ಪರಿಸ್ಥಿತಿ ಸುಧಾರಿಸುವ ನಿರೀಕ್ಷೆಯಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande