
ಬಾಗಲಕೋಟೆ, 25 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ನಗರದ
ಬಿ.ವಿ.ವಿ ಸಂಘದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯಲ್ಲಿ ಶ್ರವಣ ದೋಷದಿಂದ ಬಳಲುತ್ತಿರುವವರಿಗೆ ನೆರವಾಗುವ ನಿಟ್ಟಿನಲ್ಲಿ ಉಚಿತ ಶ್ರವಣ ಸಾಧನ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ರೋಗಿಗಳಿಗೆ ಆರೋಗ್ಯ ಸೇವೆ ತಲುಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ADIP (Assistance to Disabled Persons) ಯೋಜನೆಯಡಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಒಟ್ಟು 32 ಫಲಾನುಭವಿಗಳಿಗೆ 64 ಶ್ರವಣ ಸಾಧನಗಳನ್ನು ಉಚಿತವಾಗಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಆರೋಗ್ಯ ಸೇವೆ ಕೇವಲ ಚಿಕಿತ್ಸೆಗೆ ಸೀಮಿತವಾಗದೆ ಸಮಾಜದ ಪ್ರತಿಯೊಬ್ಬರಿಗೂ ತಲುಪಬೇಕು ಎಂಬ ಉದ್ದೇಶದಿಂದ ಕುಮಾರೇಶ್ವರ ಆಸ್ಪತ್ರೆಯ ಮೂಲಕ ಹಲವು ಜನಪರ ಆರೋಗ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು. ವಿಶೇಷವಾಗಿ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸುವ ಕಾರ್ಯ ಮುಂದುವರಿಯಲಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಆಸ್ಪತ್ರೆಯು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಆರೋಗ್ಯಕರ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಬಿ.ವಿ.ವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರಾದ ಅಶೋಕ ಎಂ. ಸಜ್ಜನ (ಬೇವೂರ), ಮೆಡಿಕಲ್ ಕಾಲೇಜಿನ ಪ್ರಾಚಾರ್ಯೆ ಡಾ. ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಧೀಕ್ಷಕ ಡಾ. ಶ್ರೀರಾಮ ಕೋರಾ, ಉಪಪ್ರಾಚಾರ್ಯ ಡಾ. ಸಿ.ಎಸ್. ಹಿರೇಮಠ, ಬಿ.ವಿ.ವಿ.ಎಸ್ ವಾಕ್ ಮತ್ತು ಶ್ರವಣ ಸಂಸ್ಥೆಯ ಪ್ರಾಚಾರ್ಯೆ ಡಾ. ಶ್ರೀವಿದ್ಯಾ, ಸಂಸ್ಥೆಯ ಸಿಬ್ಬಂದಿ, ವಿವಿಧ ವಿಭಾಗಗಳ ಮುಖ್ಯಸ್ಥರು, ವೈದ್ಯರು, ವಿದ್ಯಾರ್ಥಿಗಳು, ಫಲಾನುಭವಿಗಳು ಹಾಗೂ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande