
ಬಾಗಲಕೋಟೆ, 25 ಜೂನ್ (ಹಿ.ಸ.) :
ಆಂಕರ್ : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮೇಶ್ ಹೆಚ್. ಮೇಟಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಒಬ್ಬರ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ವೇಳೆ ಪ್ರಯಾಣಿಸುತ್ತಿದ್ದ ಆಟೋ ಪಲ್ಟಿಯಾಗಿ ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದ ಶಾಸಕ ಉಮೇಶ್ ಮೇಟಿ ಅವರು ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿ ಕುರಿತು ವೈದ್ಯರು ಹಾಗೂ ಕುಟುಂಬಸ್ಥರಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಗಾಯಾಳುಗಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಶಾಸಕರು, ಧೈರ್ಯ ತುಂಬಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಅಪಘಾತದಿಂದ ಸಂಕಷ್ಟಕ್ಕೊಳಗಾದವರಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ ಅವರು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ವೈದ್ಯರೊಂದಿಗೆ ಚರ್ಚಿಸಿದರು.
ಗಾಯಾಳುಗಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ವೈದ್ಯರಿಗೆ ಸೂಚಿಸಿದ ಶಾಸಕರು, ಚಿಕಿತ್ಸೆಯಲ್ಲಿ ಯಾವುದೇ ಕೊರತೆಯಾಗದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.
ಈ ದುರ್ಘಟನೆಯಲ್ಲಿ ಗಾಯಗೊಂಡಿರುವ ಎಲ್ಲರೂ ಆದಷ್ಟು ಬೇಗ ಸಂಪೂರ್ಣವಾಗಿ ಚೇತರಿಸಿಕೊಂಡು ತಮ್ಮ ಸಾಮಾನ್ಯ ಜೀವನಕ್ಕೆ ಮರಳಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಶಾಸಕ ಉಮೇಶ್ ಮೇಟಿ ತಿಳಿಸಿದರು.
ಜನಪ್ರತಿನಿಧಿಯಾಗಿ ಸಂಕಷ್ಟದ ಸಮಯದಲ್ಲಿ ಗಾಯಾಳುಗಳ ಜೊತೆ ನಿಂತು ಧೈರ್ಯ ತುಂಬಿದ ಶಾಸಕರ ನಡೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande