
ಬೀದರ್, 25 ಜೂನ್ (ಹಿ.ಸ.):
ಆ್ಯಂಕರ್:
ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಬೀದರ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ತುರ್ತು ಪರಿಶೀಲನಾ ಸಭೆ ನಡೆಸಿ ಜಿಲ್ಲೆಯ ಪರಿಸ್ಥಿತಿಯ ಅವಲೋಕನ ಮಾಡಿದರು.
ಸಭೆಯಲ್ಲಿ ಮಾತನಾಡಿದ ಸಚಿವರು, ಮಳೆ ತಡವಾಗಿರುವುದರಿಂದ ಜಿಲ್ಲೆಯ ರೈತರು ಆತಂಕದಲ್ಲಿದ್ದು, ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಅಗತ್ಯ ತಾಂತ್ರಿಕ ಮಾರ್ಗದರ್ಶನ ನೀಡಬೇಕು ಎಂದು ಸೂಚಿಸಿದರು. ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಸಮರ್ಪಕ ಲಭ್ಯತೆಯನ್ನು ಖಚಿತಪಡಿಸಬೇಕು ಹಾಗೂ ಯಾವುದೇ ರೈತರು ಬೀಜ ಅಥವಾ ಗೊಬ್ಬರದ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕದಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಮುಂಗಾರು ವಿಳಂಬದಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಯಾವುದೇ ಗ್ರಾಮದಲ್ಲಿ ನೀರಿನ ತೊಂದರೆ ಉಂಟಾಗದಂತೆ ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಗತ್ಯವಿದ್ದಲ್ಲಿ ಖಾಸಗಿ ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಮಾಡಬೇಕು, ಹೊಸ ಕೊಳವೆಬಾವಿಗಳನ್ನು ಕೊರೆಸಬೇಕು ಹಾಗೂ ಪ್ರತಿಯೊಂದು ಗ್ರಾಮಕ್ಕೂ ಸಮರ್ಪಕ ಕುಡಿಯುವ ನೀರು ಒದಗಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಗತಿಯನ್ನೂ ಪರಿಶೀಲಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಘನ ತ್ಯಾಜ್ಯ ವಿಲೇವಾರಿ ಘಟಕಗಳ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ರೈತರ ಹಿತಾಸಕ್ತಿಯ ರಕ್ಷಣೆ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪರಿಣಾಮಕಾರಿ ಅನುಷ್ಠಾನ ರಾಜ್ಯ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದರು. ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.