ವಿಬಿ-ಜಿ ರಾಮ್ (ಜಿ) ಯೋಜನೆ ಜಾರಿ: ಅನುಷ್ಠಾನಕ್ಕೆ ಸಿದ್ಧತೆ
ಗದಗ, 25 ಜೂನ್ (ಹಿ.ಸ.) ಆ್ಯಂಕರ್:- ಗ್ರಾಮೀಣ ಉದ್ಯೋಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಅಜೀವಿಕ ಮಿಷನ್ (ಗ್ರಾಮೀಣ) – ವಿಬಿ-ಜಿ ರಾಮ್ (ಜಿ) ಯೋಜನೆ ದೇಶಾದ್ಯಂತ ಜುಲೈ 1ರಿಂದ ಜಾರಿಗೆ ಬರಲಿದ್ದು, ಗದಗ ಜಿಲ
ಫೋಟೋ


ಗದಗ, 25 ಜೂನ್ (ಹಿ.ಸ.)

ಆ್ಯಂಕರ್:- ಗ್ರಾಮೀಣ ಉದ್ಯೋಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಅಜೀವಿಕ ಮಿಷನ್ (ಗ್ರಾಮೀಣ) – ವಿಬಿ-ಜಿ ರಾಮ್ (ಜಿ) ಯೋಜನೆ ದೇಶಾದ್ಯಂತ ಜುಲೈ 1ರಿಂದ ಜಾರಿಗೆ ಬರಲಿದ್ದು, ಗದಗ ಜಿಲ್ಲೆಯಲ್ಲಿಯೂ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಿದ್ಧತೆಗಳು ಆರಂಭಗೊಂಡಿವೆ.

ಈ ಹಿನ್ನೆಲೆಯಲ್ಲಿಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಬಿ-ಜಿ ರಾಮ್ (ಜಿ) ಯೋಜನೆ ಕುರಿತು ಜಿಲ್ಲೆಯ ವಿವಿಧ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ ಆಯೋಜಿಸಲಾಯಿತು.

ರಾಜ್ಯ ಆಯುಕ್ತಾಲಯದಿಂದ ತರಬೇತಿ ಪಡೆದ ಮಾಸ್ಟರ್ ಟ್ರೈನರ್ಗಳ ಮೂಲಕ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಅವರ ನೇತೃತ್ವದಲ್ಲಿ ತರಬೇತಿ ನೀಡಲಾಯಿತು.

ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಅವರು, ಜಿಲ್ಲೆಯಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಗ್ರಾಮೀಣ ಅಕುಶಲ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಯೋಜನೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ವಿಬಿ-ಜಿ ರಾಮ್ (ಜಿ) ಯೋಜನೆಯಡಿ ಸ್ವಯಂಪ್ರೇರಿತವಾಗಿ ಅಕುಶಲ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸುವ ಗ್ರಾಮೀಣ ಕುಟುಂಬಗಳ ವಯಸ್ಕ ಸದಸ್ಯರಿಗೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಕಡ್ಡಾಯ ಉದ್ಯೋಗ ಖಾತ್ರಿ ನೀಡಲಾಗುತ್ತದೆ. ಯೋಜನೆಯು ವಿಕಸಿತ ಗ್ರಾಮ ಪಂಚಾಯಿತಿ ಯೋಜನೆ ಮೂಲಕ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಕಾಮಗಾರಿಗಳನ್ನು ಆಯ್ಕೆ ಮಾಡಿ ಅನುಷ್ಠಾನಗೊಳಿಸುವ ವ್ಯವಸ್ಥೆಯನ್ನು ಒಳಗೊಂಡಿದೆ. ಗ್ರಾಮ ಪಂಚಾಯಿತಿಗಳಿಗೆ ಕುಟುಂಬಗಳ ನೋಂದಣಿ, ಉದ್ಯೋಗ ಅರ್ಜಿ ಸ್ವೀಕಾರ, ಕಾಮಗಾರಿಗಳ ನಿರ್ವಹಣೆ ಹಾಗೂ ದಾಖಲೆಗಳ ಸಂರಕ್ಷಣೆ ಸೇರಿದಂತೆ ಪ್ರಮುಖ ಜವಾಬ್ದಾರಿಗಳನ್ನು ವಹಿಸಲಾಗಿದೆ.

ಜಲ ಭದ್ರತೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಜೀವನೋಪಾಯ ಸೌಲಭ್ಯಗಳು ಹಾಗೂ ಹವಾಮಾನ ವೈಪರೀತ್ಯ ಶಮನ ಕಾಮಗಾರಿಗಳಿಗೆ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ. ಜೊತೆಗೆ ಸಮಗ್ರ ಡಿಜಿಟಲ್ ವ್ಯವಸ್ಥೆಯ ಮೂಲಕ ಆಡಳಿತ, ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದೆ.

ಸರ್ಕಾರದ ಮಾರ್ಗಸೂಚಿಯಂತೆ ಜುಲೈ 1ರಿಂದ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಂತ ಹಂತವಾಗಿ ತರಬೇತಿ ನೀಡಲಾಗುತ್ತಿದೆ. ಹಿಂದಿನ ನರೇಗಾ ಯೋಜನೆ ಹಾಗೂ ಪರಿಷ್ಕೃತ ವಿಬಿ-ಜಿ ರಾಮ್ (ಜಿ) ಯೋಜನೆಯ ನಡುವಿನ ಪ್ರಮುಖ ಬದಲಾವಣೆಗಳ ಕುರಿತು ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಿಂದ ತರಬೇತಿ ಪಡೆದ ನಾಲ್ವರು ಮಾಸ್ಟರ್ ಟ್ರೈನರ್ಗಳು ಮಾಹಿತಿ ನೀಡಿದರು.

2047ರ ವಿಕಸಿತ ಭಾರತದ ಕನಸಿಗೆ ಬಲ

ಭಾರತ ಸ್ವಾತಂತ್ರ್ಯದ ಶತಮಾನೋತ್ಸವದ ವೇಳೆಗೆ, ಅಂದರೆ 2047ರೊಳಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ “ವಿಕಸಿತ ಭಾರತ @2047” ಗುರಿ ಸಾಧನೆಗೆ ಈ ಯೋಜನೆ ಮಹತ್ವದ ಹೆಜ್ಜೆಯಾಗಿದ್ದು, ಗ್ರಾಮೀಣ ಉದ್ಯೋಗ ಭದ್ರತೆ ಮತ್ತು ಜೀವನೋಪಾಯ ವೃದ್ಧಿಗೆ ಹೊಸ ದಿಕ್ಕು ನೀಡಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾಮೀಣ ಉದ್ಯೋಗ), ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗಣಕಯಂತ್ರ ನಿರ್ವಾಹಕರು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಸಿಬ್ಬಂದಿ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande