
ವಿಜಯಪುರ, 26 ಜೂನ್ (ಹಿ.ಸ.) :
ಆಂಕರ್ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಮತದಾರರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟಾಗುವ ಆತಂಕ ವ್ಯಕ್ತಪಡಿಸಿದರು.
ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಬೇಕಾಗಿದ್ದು, ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು. ಅಲ್ಪಸಂಖ್ಯಾತರು ಸೇರಿದಂತೆ ಕಾಂಗ್ರೆಸ್ ಬೆಂಬಲಿಸುವ ಮತದಾರರನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪವನ್ನು ಅವರು ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಲವು ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ ಅವರು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಬೆಳವಣಿಗೆ ಎಂದು ಹೇಳಿದರು.
ದೇಶದ ವಿವಿಧ ಭಾಗಗಳಲ್ಲಿ SIR ಪ್ರಕ್ರಿಯೆ ಕುರಿತು ಉದ್ಭವಿಸಿರುವ ವಿವಾದಗಳು ಹಾಗೂ ಪ್ರತಿಪಕ್ಷಗಳ ಮೇಲೆ ಪರಿಣಾಮ ಬೀರಿದ ಘಟನೆಗಳನ್ನು ಕಾರ್ಯಕರ್ತರೊಂದಿಗೆ ಹಂಚಿಕೊಂಡ ಅವರು, ಪ್ರತಿಯೊಬ್ಬ ಅರ್ಹ ಮತದಾರನ ಮತದಾನದ ಹಕ್ಕನ್ನು ರಕ್ಷಿಸುವುದು ಎಲ್ಲರ ಜವಾಬ್ದಾರಿ ಎಂದು ತಿಳಿಸಿದರು.
“ಮತದಾರರ ಪಟ್ಟಿಯಲ್ಲಿ ಯಾವುದೇ ಅನ್ಯಾಯವಾಗದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಜಾಗೃತರಾಗಿರಬೇಕು. ಅರ್ಹ ಮತದಾರರ ಹೆಸರುಗಳು ಪಟ್ಟಿಯಲ್ಲಿ ಉಳಿಯುವಂತೆ ಪರಿಶೀಲನೆ ನಡೆಸಬೇಕು” ಎಂದು ಕರೆ ನೀಡಿದರು.
ಕಾರ್ಯಾಗಾರವನ್ನು ಮಾಜಿ ಶಾಸಕ ಸೋಮಣ್ಣ ಬೇವಿನಮರದ ಅವರು ಸಂಘಟಿಸಿದ್ದರು. ಕಾರ್ಯಕ್ರಮದಲ್ಲಿ ಡಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಶಾಸಕರಾದ ವಿಠ್ಠಲ ಕಟಕದೊಂಡ, ಸುನೀಲಗೌಡ ಪಾಟೀಲ, ಮಾಜಿ ಶಾಸಕ ಪ್ರೊ. ರಾಜು ಆಲಗೂರ, ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಕಾಂತಾ ನಾಯಕ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಗಣ್ಯರು ಭಾಗವಹಿಸಿದ್ದರು.
ಪ್ರಜಾಪ್ರಭುತ್ವದ ಬಲ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕಿನಲ್ಲಿದೆ. ಆ ಹಕ್ಕಿನ ರಕ್ಷಣೆಗೆ ಕಾಂಗ್ರೆಸ್ ಸದಾ ಬದ್ಧವಾಗಿರಲಿದೆ ಎಂದು ಮುಖಂಡರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande