
ವಿಜಯಪುರ, 26 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಬ್ಯಾಂಕ್ನ ಹಲವು ದಾಖಲೆಗಳು, ಕಂಪ್ಯೂಟರ್ಗಳು ಹಾಗೂ ಪೀಠೋಪಕರಣಗಳು ಸುಟ್ಟು ಹಾನಿಗೊಳಗಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.
ಬ್ಯಾಂಕ್ನಲ್ಲಿ ಬೆಂಕಿ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತಂದರು. ಬೆಂಕಿಯ ತೀವ್ರತೆಯಿಂದಾಗಿ ಬ್ಯಾಂಕ್ ಒಳಭಾಗದಲ್ಲಿದ್ದ ಕೆಲವು ಪ್ರಮುಖ ದಾಖಲೆಗಳು, ಕಂಪ್ಯೂಟರ್ ವ್ಯವಸ್ಥೆಗಳು, ಪೀಠೋಪಕರಣಗಳು ಹಾಗೂ ಇತರೆ ಸಾಮಗ್ರಿಗಳು ಸುಟ್ಟುಹೋಗಿವೆ.
ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಸಂಭವಿಸಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಆದರೆ ಬೆಂಕಿ ಅವಘಡದ ನಿಖರ ಕಾರಣ ಹಾಗೂ ಸಂಭವಿಸಿದ ಆಸ್ತಿ ನಷ್ಟದ ಪ್ರಮಾಣದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ಸಂಗತಿಯಾಗಿದೆ. ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರ ಸುರಕ್ಷತೆಗೆ ಯಾವುದೇ ತೊಂದರೆ ಉಂಟಾಗಿಲ್ಲ ಎಂದು ತಿಳಿದುಬಂದಿದೆ.
ಗ್ರಾಹಕರು ಆತಂಕಪಡಬೇಕಿಲ್ಲ: ಶಾಖಾಧಿಕಾರಿ
ಮುಳವಾಡ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖಾಧಿಕಾರಿಗಳು ಪ್ರತಿಕ್ರಿಯಿಸಿ, ಬೆಂಕಿ ಅವಘಡದಿಂದ ಕೆಲವು ದಾಖಲೆಗಳು ಹಾಗೂ ಕಂಪ್ಯೂಟರ್ಗಳಿಗೆ ಹಾನಿಯಾಗಿದೆ. ಆದರೆ ಗ್ರಾಹಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ.
ಬ್ಯಾಂಕ್ನ ಪ್ರಮುಖ ಮಾಹಿತಿಗಳು ಸುರಕ್ಷಿತ ಡಿಜಿಟಲ್ ವ್ಯವಸ್ಥೆಯಲ್ಲಿ ಸಂಗ್ರಹವಾಗಿವೆ. ಶೀಘ್ರದಲ್ಲೇ ಬ್ಯಾಂಕ್ ಸೇವೆಗಳನ್ನು ಎಂದಿನಂತೆ ಪುನರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಬ್ಯಾಂಕ್ ಅಧಿಕಾರಿಗಳು ಹಾನಿಗೊಳಗಾದ ವಸ್ತುಗಳ ಪರಿಶೀಲನೆ ನಡೆಸುತ್ತಿದ್ದು, ಸೇವೆಗಳ ಪುನರ್ಸ್ಥಾಪನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande