
ಬೆಂಗಳೂರು, 26 ಜೂನ್ (ಹಿ.ಸ.) :
ಆ್ಯಂಕರ್ : ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯನ್ನು ಅಂಗವಾಗಿ ಬೆಂಗಳೂರಿನ ಬ್ಯಾಟರಾಯನಪುರ ಕ್ಷೇತ್ರದ ಹೆಬ್ಬಾಳ ಕೆಂಪಾಪುರದಲ್ಲಿ ಒಕ್ಕಲಿಗರ ಹಿತರಕ್ಷಣಾ ವೇದಿಕೆ ವತಿಯಿಂದ ಹಾಗೂ ಸ್ಥಳೀಯ ಸಂಘಟನೆಗಳ ಸಹಯೋಗದಲ್ಲಿ ಶನಿವಾರ (ಜೂನ್ 27) ನಾನಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.
ಬೆಂಗಳೂರು ನಿರ್ಮಾತೃಗಳಾದ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯುಳ್ಳ ಆಡಳಿತಗಾರರಾಗಿದ್ದು, ಸರ್ವಜನಾಂಗದ ನೆಲೆಯಾಗಿ ಬೆಂಗಳೂರನ್ನು ನಿರ್ಮಿಸಿದ ಮಹಾನ್ ವ್ಯಕ್ತಿತ್ವ. ಅವರ ದೂರದೃಷ್ಟಿಯ ಫಲವಾಗಿ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮಹಾನಗರವಾಗಿ ಬೆಳೆದಿದೆ. ಹೀಗಾಗಿ ಅವರ ಆದರ್ಶ, ಸೇವೆ ಹಾಗೂ ಕೊಡುಗೆಗಳನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಜಯಂತಿ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯೊಂದಿಗೆ ಆಯ್ದ ರಸ್ತೆಗಳಲ್ಲಿ ಬೈಕ್ ರ‍್ಯಾಲಿ ಹಾಗೂ ಮೆರವಣಿಗೆ ನಡೆಯಲಿದೆ. ಇದರ ಜೊತೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ಸಂಜೆ ವೇದಿಕೆ ಕಾರ್ಯಕ್ರಮ ಹಾಗೂ ರಸಮಂಜರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು, ಯುವಕರು, ಮಹಿಳೆಯರು ಹಾಗೂ ಎಲ್ಲ ಸಮುದಾಯದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತು, ಬ್ಯಾಟರಾಯನಪುರ ಕ್ಷೇತ್ರದ ಅಧ್ಯಕ್ಷ ರೇಣುಕ ಹೆಗ್ಗಡೆ ಹಾಗೂ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.