
ಧರ್ಮಸ್ಥಳ, 26 ಜೂನ್ (ಹಿ.ಸ.) :
ಆ್ಯಂಕರ್ : ನನ್ನ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ರೀತಿಯ ವ್ಯವಹಾರ ಅಥವಾ ಆತ್ಮೀಯತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದರು. ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ರಾಜಕೀಯ ಸೌಜನ್ಯವಾಗಿ ನೀಡಬೇಕಾದ ಗೌರವವನ್ನು ಮಾತ್ರ ನೀಡಿದ್ದೇನೆ ಎಂದು ಹೇಳಿದರು.
ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಮಂಗಳೂರಿಗೆ ಆಗಮಿಸಿದ ವಿಜಯೇಂದ್ರ ಅವರು ಶುಕ್ರವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಕುರಿತು ಪ್ರತಿಕ್ರಿಯಿಸಿದ ಅವರು, ಅಡ್ಡ ಮತದಾನಕ್ಕೆ ತಾನೇ ಕಾರಣ ಎಂಬ ರೀತಿಯಲ್ಲಿ ಸುಳ್ಳು ಪ್ರಚಾರ ನಡೆಸಲಾಗುತ್ತಿದೆ. ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ರಾಜ್ಯದ ಮುಖ್ಯಮಂತ್ರಿಗಳು ಜೊತೆಯಾಗಿದ್ದಾರೆ ಎಂಬ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ, ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ವ್ಯವಹಾರವಿಲ್ಲ. ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರಿಗೆ ದೇವರು ಒಳ್ಳೆಯ ಬುದ್ಧಿ ನೀಡಲಿ ಎಂದು ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.
ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಇಬ್ಬರು ಅಭ್ಯರ್ಥಿಗಳು ಗೆದ್ದಿದ್ದರೂ, ಅಡ್ಡ ಮತದಾನವು ತಮಗೂ ಹಾಗೂ ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೂ ತೀವ್ರ ನೋವುಂಟು ಮಾಡಿದೆ ಎಂದರು.
ಫಲಿತಾಂಶದ ಮರುದಿನ ಶಾಸಕರ ಸಭೆಯನ್ನು ಧರ್ಮಸ್ಥಳದಲ್ಲೇ ನಡೆಸಿ ಆಣೆ-ಪ್ರಮಾಣ ಮಾಡಿಸಬೇಕೆಂದು ಹೇಳಿದ್ದೇ ನಿಜ. ಆದರೆ ಪಕ್ಷದ ಹಿರಿಯರ ಸಲಹೆ ಹಾಗೂ ಅಭಿಪ್ರಾಯಕ್ಕೆ ಗೌರವ ನೀಡಿ ಆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂದು ತಿಳಿಸಿದರು.
ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿರುವುದಾಗಿ ಹೇಳಿದ ವಿಜಯೇಂದ್ರ, ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ನಿವಾರಣೆಯಾಗಲಿ, ಜನರಿಗೆ ಉತ್ತಮ ದಿನಗಳು ಬರಲಿ ಎಂದು ಪ್ರಾರ್ಥಿಸಿದ್ದೇನೆ. ಜೊತೆಗೆ, ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಜನಪರ, ಅಭಿವೃದ್ಧಿಪರ ಹಾಗೂ ಹಿಂದೂಗಳ ರಕ್ಷಣೆಗೆ ಬದ್ಧವಾದ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ ಎಂದು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದರು.
ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಿಂದೆ 17 ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದನ್ನು ನೆನಪಿಸಿದರು. ಪ್ರಸ್ತುತ ರಾಜ್ಯದಲ್ಲಿರುವ ಭ್ರಷ್ಟ, ಜನವಿರೋಧಿ ಹಾಗೂ ರೈತ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಪ್ರಜಾಪ್ರಭುತ್ವದ ಮಾರ್ಗದಲ್ಲಿ ಅಧಿಕಾರದಿಂದ ಕೆಳಗಿಳಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.