
ವಿಜಯಪುರ, 26 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ನಗರದ ಐತಿಹಾಸಿಕ ಕೋಟೆಗೋಡೆ ಹಾಗೂ ಅದರ ಸುತ್ತಲಿನ ಕಂದಕದ ಸ್ವಚ್ಛತೆ ಮತ್ತು ದುರಸ್ತಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ವಿಜಯಪುರದ ಪಾರಂಪರಿಕ ಸ್ಮಾರಕಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಕೋಟೆಗೋಡೆ ಹಾಗೂ ಕಂದಕದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದು ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕಾಲಕ್ರಮೇಣ ಕೋಟೆಗೋಡೆಯ ಹಲವು ಭಾಗಗಳಲ್ಲಿ ಹಾನಿಯಾಗಿದ್ದು, ಕಂದಕದಲ್ಲಿ ಗಿಡಗಂಟಿಗಳು ಬೆಳೆದು ಸ್ವಚ್ಛತೆಯ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸ್ವಚ್ಛತಾ ಕಾರ್ಯ, ದುರಸ್ತಿ ಹಾಗೂ ಸಂರಕ್ಷಣಾ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿಜಯಪುರವು ಐತಿಹಾಸಿಕ ಹಾಗೂ ಸಾಂಸ್ಕೃತಿಕವಾಗಿ ಮಹತ್ವದ ನಗರವಾಗಿದ್ದು, ಇಲ್ಲಿನ ಕೋಟೆ, ಸ್ಮಾರಕಗಳು ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಗಳಾಗಿವೆ. ಅವುಗಳ ಸಂರಕ್ಷಣೆಯ ಮೂಲಕ ನಗರದ ವೈಭವವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.
ಕೋಟೆ ಪ್ರದೇಶದಲ್ಲಿ ಸ್ವಚ್ಛತೆ, ಸೌಂದರ್ಯೀಕರಣ, ಬೆಳಕಿನ ವ್ಯವಸ್ಥೆ ಹಾಗೂ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಸಮಗ್ರ ಯೋಜನೆ ರೂಪಿಸಲಾಗುವುದು.
ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande