ಹುನಗುಂಡಿ ಗ್ರಾಮದಲ್ಲಿ ತೀವ್ರ ಜಲಕ್ಷಾಮ ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ
ಗದಗ, 26 ಜೂನ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ರೋಣ ತಾಲೂಕಿನ ಹುನಗುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಎರಡು-ಮೂರು ತಿಂಗಳುಗಳಿಂದ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ಹಾಗೂ ಜಾನುವಾರುಗಳು ಸಂಕಷ್ಟದ ಜೀವನ ನಡೆಸುವಂತಾಗಿದೆ. ಸಮಸ್ಯೆ ನಿವಾರಣೆಗೆ ಸಂಬಂಧಿಸಿದ ಅಧಿ
ಫೋಟೋ


ಗದಗ, 26 ಜೂನ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ರೋಣ ತಾಲೂಕಿನ ಹುನಗುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಎರಡು-ಮೂರು ತಿಂಗಳುಗಳಿಂದ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ಹಾಗೂ ಜಾನುವಾರುಗಳು ಸಂಕಷ್ಟದ ಜೀವನ ನಡೆಸುವಂತಾಗಿದೆ. ಸಮಸ್ಯೆ ನಿವಾರಣೆಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರು ತಾಲೂಕು ಆಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿದ್ದು, ಮಹಿಳೆಯರು ಹಾಗೂ ಮಕ್ಕಳು ದೂರದ ಪ್ರದೇಶಗಳಿಂದ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳಿಗೂ ಸಮರ್ಪಕವಾಗಿ ನೀರು ದೊರೆಯದ ಕಾರಣ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಲವು ಬಾರಿ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ಸಮಸ್ಯೆಯನ್ನು ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ಕಲ್ಪಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಕಂದುಕುರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸುವ ಕೆಲಸ ಮಾಡುತ್ತಿಲ್ಲ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳ ಸಮಸ್ಯೆಗಳಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೂ ಪ್ರಶ್ನೆ ಎತ್ತಿರುವ ಸಾರ್ವಜನಿಕರು, ತಾಲೂಕು ಪಂಚಾಯಿತಿಯಿಂದ ಸಮರ್ಪಕ ಮೇಲ್ವಿಚಾರಣೆ ಇಲ್ಲದಿರುವುದೇ ಸಮಸ್ಯೆಗಳು ಉಲ್ಬಣಗೊಳ್ಳಲು ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವ ಬದಲು ಅಧಿಕಾರಿಗಳು ಕಚೇರಿಗಳಲ್ಲೇ ಸೀಮಿತರಾಗಿದ್ದಾರೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆಕ್ರೋಶ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಚುನಾವಣೆ ವೇಳೆ ಮತದಾನ ಬಹಿಷ್ಕರಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ನಾವೂ ಈ ದೇಶದ ಪ್ರಜೆಗಳು. ನಮ್ಮ ಸಮಸ್ಯೆಗಳಿಗೆ ಸ್ಪಂದಿಸದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಪ್ರಜಾಪ್ರಭುತ್ವದ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ತಾಲೂಕು ಸಂಚಾಲಕ ಹನುಮಂತ ಚಲವಾದಿ, ಹುನಗುಂಡಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಈ ಕುರಿತು ಜಿಲ್ಲಾಡಳಿತ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸಿ, ವಾಸ್ತವಾಂಶವನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಗ್ರಾಮಸ್ಥರ ವಿವಿಧ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮಸ್ಯೆ ಪರಿಹರಿಸುವಲ್ಲಿ ವಿಳಂಬ ಮಾಡಿದರೆ ಲೋಕಾಯುಕ್ತಕ್ಕೆ ದೂರು ಸಲ್ಲಿಸುವುದರ ಜೊತೆಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ಹುನಗುಂಡಿ ಗ್ರಾಮದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಗೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಶೀಘ್ರ ಸ್ಪಂದಿಸಿ ತುರ್ತು ಕ್ರಮ ಕೈಗೊಂಡು ಗ್ರಾಮಸ್ಥರಿಗೆ ನಿರಂತರ ನೀರು ಪೂರೈಕೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande