
ಬೆಂಗಳೂರು, 27 ಜೂನ್ (ಹಿ.ಸ.) :
ಆ್ಯಂಕರ್ : ಸರ್ಕಾರದ ಆರೋಗ್ಯ ಇಲಾಖೆಯ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿರುವ ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್. ಅಶೋಕ್, ಸರ್ಕಾರ ಬದಲಾದರೂ ಆರೋಗ್ಯ ಇಲಾಖೆಯ ದುಸ್ಥಿತಿ ಮಾತ್ರ ಬದಲಾಗಿಲ್ಲ ಎಂದು ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಮುಖ್ಯಮಂತ್ರಿ ಬದಲಾದರು, ಆರೋಗ್ಯ ಸಚಿವರು ಬದಲಾದರು. ಆದರೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಅಸಮರ್ಥತೆ ಮತ್ತು ಜನವಿರೋಧಿ ಆಡಳಿತ ಮಾತ್ರ ಬದಲಾಗಿಲ್ಲ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಆರೋಗ್ಯ ಇಲಾಖೆಯಲ್ಲೇ 35,196 ಹುದ್ದೆಗಳು ಖಾಲಿ ಇದ್ದು, ಸರ್ಕಾರಿ ಆಸ್ಪತ್ರೆಗಳು ಸಮಸ್ಯೆಗಳ ಆಗರವಾಗಿವೆ ಎಂದು ಆರೋಪಿಸಿರುವ ಅವರು, ರಾತ್ರಿ ವೇಳೆ ತುರ್ತು ಚಿಕಿತ್ಸೆಗೆ ಬರುವ ರೋಗಿಗಳನ್ನು ನೋಡಿಕೊಳ್ಳಲು ಸಿಬ್ಬಂದಿಯ ಕೊರತೆ ಎದುರಾಗಿದೆ. ಪ್ಯಾರಾಸಿಟಮಾಲ್ನಂತಹ ಮೂಲಭೂತ ಔಷಧಗಳೂ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಡ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವಂತಾಗಿದೆ ಎಂದು ದೂರಿದ್ದಾರೆ.
ಇದೇ ವೇಳೆ, ಬಡವರು ಹಾಗೂ ಕೂಲಿ ಕಾರ್ಮಿಕರ ಆರೋಗ್ಯ ಸೇವೆಗಾಗಿ ಆರಂಭಿಸಲಾಗಿದ್ದ 'ನಮ್ಮ ಕ್ಲಿನಿಕ್' ಯೋಜನೆಯ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿರುವ ಅಶೋಕ್, ವೈದ್ಯರು, ನರ್ಸ್ಗಳು ಹಾಗೂ ಸಿಬ್ಬಂದಿ ಹಗಲಿರುಳು ಸೇವೆ ಸಲ್ಲಿಸುತ್ತಿದ್ದರೂ ಅವರಿಗೆ ಸಂಬಳ ನೀಡದಿರುವುದು ಸರ್ಕಾರದ ವೈಫಲ್ಯ ಎಂದು ಟೀಕಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಖಜಾನೆ ಖಾಲಿ ಮಾಡಿ, ಇದೀಗ ಆರೋಗ್ಯ ಇಲಾಖೆಯನ್ನೇ ಐಸಿಯು ಸ್ಥಿತಿಗೆ ತಳ್ಳಲಾಗಿದೆ ಎಂದು ಆರೋಪಿಸಿದ ಅವರು, ತಕ್ಷಣವೇ 35,196 ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ 'ನಮ್ಮ ಕ್ಲಿನಿಕ್' ಸಿಬ್ಬಂದಿಯ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇಲ್ಲವಾದರೆ ಬಡವರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಈ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.