
ಬಾಗಲಕೋಟೆ, 28 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ನಗರದ ವಿನಾಯಕ ನಗರ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಆಳುಗುಂಡಿ ತುಂಬಿ ಹರಿಯುತ್ತಿದ್ದು, ಕೊಳಚೆ ನೀರು ರಸ್ತೆಯ ಮೇಲೆ ಹರಿದು ದುರ್ವಾಸನೆ ಹಾಗೂ ಅನಾರೋಗ್ಯದ ಭೀತಿ ಉಂಟಾಗಿದೆ.
ಸಮಸ್ಯೆ ಕುರಿತು ಸ್ಥಳೀಯರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಶಾಶ್ವತ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಆಳುಗುಂಡಿಯಿಂದ ಹೊರಬರುತ್ತಿರುವ ಕೊಳಚೆ ನೀರು ರಸ್ತೆ ಮೇಲೆ ನಿಂತು ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆ ಉಂಟು ಮಾಡುತ್ತಿದೆ.
ಮಳೆಗಾಲದ ಸಂದರ್ಭದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ನಗರದ ಸ್ವಚ್ಛತೆ ಮತ್ತು ಒಳಚರಂಡಿ ವ್ಯವಸ್ಥೆ ನಿರ್ವಹಣೆ ನಗರಸಭೆಯ ಪ್ರಮುಖ ಜವಾಬ್ದಾರಿಯಾಗಿದ್ದರೂ, ವಿನಾಯಕ ನಗರದಲ್ಲಿ ಉಂಟಾಗಿರುವ ಈ ಸಮಸ್ಯೆಯ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ತಕ್ಷಣವೇ ಆಳುಗುಂಡಿ ದುರಸ್ತಿ ಮಾಡಿ, ಕೊಳಚೆ ನೀರು ಹರಿಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿ, ಶೀಘ್ರ ಪರಿಹಾರ ಒದಗಿಸಬೇಕು. ಇಲ್ಲವಾದರೆ ಸಾರ್ವಜನಿಕರು ಪ್ರತಿಭಟನೆ ನಡೆಸುವ ಪರಿಸ್ಥಿತಿ ಎದುರಾಗಬಹುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande