
ನವದೆಹಲಿ, 29 ಜೂನ್ (ಹಿ.ಸ.):
ಆ್ಯಂಕರ್:
ನಿತಿನ್ ಗಡ್ಕರಿ ಅವರು ಜಾರ್ಖಂಡ್ನ 3,245 ಕಿಲೋಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಗುಣಮಟ್ಟ ಮತ್ತು ನಿರ್ವಹಣಾ ಕಾಮಗಾರಿಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಬಂದ ಪ್ರತಿಕ್ರಿಯೆಗಳನ್ನು ಪರಿಗಣಿಸಿ ಈ ಪರಿಶೀಲನಾ ಸಭೆಯನ್ನು ನಡೆಸಲಾಗಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರನ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ನಿರ್ಮಾಣ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು, ಕಾಮಗಾರಿಗಳ ಗುಣಮಟ್ಟ ಕಾಪಾಡುವುದು ಹಾಗೂ ಆಧುನಿಕ ತಂತ್ರಜ್ಞಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುವ ಅಗತ್ಯವನ್ನು ಗಡ್ಕರಿ ಒತ್ತಿ ಹೇಳಿದರು. ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಬಾಳಿಕೆ ಬರುವ ಹೆದ್ದಾರಿಗಳು ದೇಶದ ಆರ್ಥಿಕ ಅಭಿವೃದ್ಧಿ, ಸಂಪರ್ಕ ವ್ಯವಸ್ಥೆ ಮತ್ತು ಪ್ರಯಾಣಿಕರ ಸುರಕ್ಷತೆಗೆ ಅತ್ಯಂತ ಅಗತ್ಯವೆಂದು ಅವರು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಮತ್ತು ನಿರ್ವಹಣೆಯಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ ಸಚಿವರು, ಎಲ್ಲಾ ಕಾಮಗಾರಿಗಳನ್ನು ತಾಂತ್ರಿಕ ಮಾನದಂಡಗಳಿಗೆ ಅನುಗುಣವಾಗಿ ಪೂರ್ಣಗೊಳಿಸಬೇಕು ಹಾಗೂ ಪ್ರತಿಯೊಂದು ಯೋಜನೆಯಲ್ಲೂ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಕಾಪಾಡಬೇಕು ಎಂದು ನಿರ್ದೇಶಿಸಿದರು.
ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಗಡ್ಕರಿ, ನೀರು ನಿಲ್ಲುವಿಕೆ, ರಸ್ತೆ ಹಾನಿ, ಗುಂಡಿಗಳು ಹಾಗೂ ಇತರ ಸಮಸ್ಯೆಗಳನ್ನು ತಡೆಗಟ್ಟಲು ಮುಂಚಿತವಾಗಿಯೇ ಪರಿಣಾಮಕಾರಿ ಕಾರ್ಯತಂತ್ರ ರೂಪಿಸಬೇಕು ಎಂದು ಹೇಳಿದರು. ಜೊತೆಗೆ, ತ್ವರಿತ ಪ್ರತಿಕ್ರಿಯೆ ವ್ಯವಸ್ಥೆಯನ್ನು ಬಲಪಡಿಸಿ, ಹೆದ್ದಾರಿಗಳ ನಿರಂತರ ಮೇಲ್ವಿಚಾರಣೆ ಮತ್ತು ಸಮಯೋಚಿತ ದುರಸ್ತಿ ಕಾರ್ಯಗಳನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದರು.
ಮಳೆಗಾಲದಲ್ಲಿ ರಸ್ತೆ ಸುರಕ್ಷತೆ ಕಾಪಾಡುವುದು ಹಾಗೂ ಹೆದ್ದಾರಿಗಳ ದೀರ್ಘಕಾಲಿಕ ಬಾಳಿಕೆ ಖಚಿತಪಡಿಸುವುದು ಅತ್ಯುನ್ನತ ಆದ್ಯತೆಯಾಗಿದ್ದು, ಇದಕ್ಕಾಗಿ ಆಧುನಿಕ ತಾಂತ್ರಿಕ ಪರಿಹಾರಗಳು, ನಿರಂತರ ತಪಾಸಣೆ ಹಾಗೂ ಗುಣಮಟ್ಟದ ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕೆಂದು ಅವರು ತಿಳಿಸಿದರು.
ಸಭೆಯಲ್ಲಿ ಜಾರ್ಖಂಡ್ನ ರಾಷ್ಟ್ರೀಯ ಹೆದ್ದಾರಿ ಜಾಲದ ಪ್ರಸ್ತುತ ಸ್ಥಿತಿ, ವಿವಿಧ ನಿರ್ಮಾಣ ಹಾಗೂ ನಿರ್ವಹಣಾ ಯೋಜನೆಗಳ ಪ್ರಗತಿ ಮತ್ತು ಬಾಕಿ ಉಳಿದಿರುವ ಕಾಮಗಾರಿಗಳ ಪರಿಶೀಲನೆ ನಡೆಸಲಾಯಿತು. ಸಂಬಂಧಿತ ಸಂಸ್ಥೆಗಳು ಅಗತ್ಯ ತಿದ್ದುಪಡಿ ಕ್ರಮಗಳನ್ನು ಕೈಗೊಂಡು ಕಾಮಗಾರಿಗಳಿಗೆ ವೇಗ ನೀಡುವ ಮೂಲಕ ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಉತ್ತಮ ರಸ್ತೆ ಸೌಲಭ್ಯ ಕಲ್ಪಿಸಬೇಕು ಎಂದು ಕೇಂದ್ರ ಸಚಿವರು ನಿರ್ದೇಶಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.