
ಕೋಲಾರ, ಜೂನ್ ೨೯ (ಹಿ.ಸ) :
ಆ್ಯಂಕರ್ : ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲೇಜು ವಿದ್ಯಾರ್ಥಿಗಳಿಂದ ಕೋಲಾರ ನಗರದಲ್ಲಿ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಡಾ. ಪ್ರವೀಣ್ ಪಿ ಬಾಗೇವಾಡಿ ರವರ ಸೂಚನೆಯಂತೆ ಕೋಲಾರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕಾಲೇಜು ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಕಾಲೇಜುಗಳಲ್ಲಿನ ಚುನಾವಣಾ ಸಾಕ್ಷರತಾ ಕ್ಲಬ್ನ ಸದಸ್ಯ ವಿದ್ಯಾರ್ಥಿಗಳು ಇಂದು ನಗರದ ಬಂಗಾರಪೇಟೆ ಸರ್ಕಲ್ನಿಂದ ಡೂಮ್ಲೈಟ್ ಸರ್ಕಲ್, ಕ್ಲಾಕ್ ಟವರ್, ಬಸ್ ನಿಲ್ದಾಣ, ದೊಡ್ಡಪೇಟೆ ಮಾರ್ಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಎಲ್ಲಾ ನಾಗರಿಕರು ಭಾಗವಹಿಸಿ, ತಮ್ಮ ಮತದಾನದ ಹಕ್ಕು ಪಡೆದುಕೊಳ್ಳಲು ಕರೆ ನೀಡಿದರು.
ಜೂನ್ ೩೦ ರಿಂದ ಜುಲೈ ೨೯ರವರೆಗೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಆರಂಭವಾಗಲಿದೆ. ಎಲ್ಲಾ ಮತದಾರರ ಮನೆಗಳಿಗೆ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಆಗ ಬೂತ್ ಮಟ್ಟದ ಅಧಿಕಾರಿಗಳು ನೀಡುವ ಎನ್ಯೂಮರೇಷನ್ ಫಾರಂಗಳನ್ನು, ಎಲ್ಲಾ ಅರ್ಹ ಮತದಾರರು ಕಡ್ಡಾಯವಾಗಿ ಫಾರಂ ಭರ್ತಿ ಮಾಡಿ ನೀಡಬೇಕಿದೆ. ಅರ್ಹ ನಾಗರಿಕರೆಲ್ಲರಿಗೂ ಮತದಾನದ ಹಕ್ಕು ಸಿಗುವಂತೆ ಮಾಡಲು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಳ್ಳಲಾಗಿದ್ದು, ಹೊಸ ಮತದಾರರ ಸೇರ್ಪಡೆ, ವಿಳಾಸ, ಫೋಟೋ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಮೃತರು ಹಾಗೂ ಅನರ್ಹರನ್ನ ಮತದಾರರು ಪಟ್ಟಿ ತೆಗೆದುಹಾಕಲಾಗುವುದು ಎಂದು ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ವಿದ್ಯಾರ್ಥಿಗಳು ಅರಿವು ಮೂಡಿಸಿದರು.
ಜಾಥಾದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಹೆಚ್.ಎನ್ ಮಂಜುನಾಥ್ ಸ್ವಾಮಿ, ಸಹಾಯಕ ಕಾರ್ಯದರ್ಶಿ ವಿ. ವೆಂಕಟಾಚಲಪತಿ, ಸಹಾಯಕ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ, ಪ್ರಾಂಶುಪಾಲರು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಾಂಶುಪಾಲರು ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರಾಂಶುಪಾಲರು ನೂತನ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ನೂತನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್