
ಮಂಡ್ಯ, 29 ಜೂನ್ (ಹಿ.ಸ.):
ಆ್ಯಂಕರ್:
ಮಂಡ್ಯ ಜಿಲ್ಲೆಯಲ್ಲಿನ ಮಕ್ಕಳು ಕಾಣೆಯಾದ ಹಾಗೂ ಅಪಹರಣಕ್ಕೊಳಗಾದ ಪ್ರಕರಣಗಳಲ್ಲಿ ಇನ್ನೂ ಪತ್ತೆಯಾಗದೇ ಬಾಕಿ ಉಳಿದಿರುವ ಪ್ರಕರಣಗಳ ತನಿಖೆ ಮತ್ತು ಪತ್ತೆ ಕಾರ್ಯವನ್ನು ವೇಗಗೊಳಿಸುವ ಉದ್ದೇಶದಿಂದ ಮಂಡ್ಯ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ ಎಂ. ಆನಂದ್, ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಶೋಭಾರಾಣಿ ವಿ.ಜೆ. ಅವರು ಬಾಕಿ ಇರುವ ಪ್ರಕರಣಗಳ ಪ್ರಗತಿಯನ್ನು ಪರಿಶೀಲಿಸಿ, ಮಕ್ಕಳನ್ನು ಶೀಘ್ರವಾಗಿ ಪತ್ತೆಹಚ್ಚಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಪ್ರತಿ ಪ್ರಕರಣದ ತನಿಖೆಯ ಸ್ಥಿತಿ, ಪತ್ತೆ ಕಾರ್ಯದಲ್ಲಿ ಎದುರಾಗುತ್ತಿರುವ ಸವಾಲುಗಳು ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಬಗ್ಗೆ ಚರ್ಚೆ ನಡೆಸಲಾಯಿತು. ಕಾಣೆಯಾದ ಮಕ್ಕಳನ್ನು ಸುರಕ್ಷಿತವಾಗಿ ಪತ್ತೆಹಚ್ಚಲು ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಬಂಧಿತ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವನ್ನು ಒತ್ತಿ ಹೇಳಲಾಯಿತು.
ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕ ತಿಮ್ಮಯ್ಯ ಸಿ.ಇ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.