
ಬೆಂಗಳೂರು, 29 ಜೂನ್ (ಹಿ.ಸ.):
ಆ್ಯಂಕರ್:ಸುಸ್ಥಿರ, ಯೋಜಿತ ಹಾಗೂ ನಾಗರಿಕ ಸ್ನೇಹಿ ನಗರಗಳ ನಿರ್ಮಾಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಸೋಮವಾರ ಪೌರಾಡಳಿತ ನಿರ್ದೇಶನಾಲಯದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ 'ಭವಿಷ್ಯದ ನಗರ ಯೋಜನೆ' ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ನಗರಗಳ ಸುಸ್ಥಿರ ಅಭಿವೃದ್ಧಿ, ಮೂಲಸೌಕರ್ಯ ವಿಸ್ತರಣೆ, ನಾಗರಿಕರಿಗೆ ಉತ್ತಮ ಸೇವೆಗಳ ಒದಗಿಕೆ ಹಾಗೂ ದೀರ್ಘಾವಧಿಯ ನಗರ ಯೋಜನೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಲಾಯಿತು.
ಸಭೆಯಲ್ಲಿ ಪ್ರಸ್ತುತ ರಾಜ್ಯದ ವಿವಿಧ ನಗರಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳು ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಸಚಿವರು ಅವಲೋಕಿಸಿದರು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾಮಗಾರಿಗಳ ಗುಣಮಟ್ಟಕ್ಕೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ಎಲ್ಲಾ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ನಗರಗಳ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ವೈಜ್ಞಾನಿಕ ಹಾಗೂ ಸಮಗ್ರ ಯೋಜನೆಗಳನ್ನು ರೂಪಿಸಿ, ಜನಸ್ನೇಹಿ ನಗರಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸಲಹೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.