
ಬೆಂಗಳೂರು, 29 ಜೂನ್ (ಹಿ.ಸ.) :
ಆ್ಯಂಕರ್ : ತಮಿಳು ನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ರಾಜ್ಯದಲ್ಲಿ ಮುಂಗಾರು ಮಳೆ ಕ್ಷೀಣಿಸಿರುವ ಪರಿಣಾಮ ಬರದ ಆತಂಕ ಎದುರಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುಗಡೆ ಮಾಡುತ್ತಿರುವುದು ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾದ ಕ್ರಮ ಎಂದು ಆರೋಪಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕೆ ಆರ್ ಎಸ್ ಜಲಾಶಯದಿಂದ ಪ್ರತಿದಿನ ಎರಡು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ ಎಂದು ದೂರಿರುವ ಅವರು, ಇದು ರಾಜ್ಯದ ಜನರ ಬೆನ್ನಿಗೆ ಚೂರಿ ಇರಿದಂತಾಗಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿಲ್ಲದಾಗ ನಮ್ಮ ನೀರು ನಮ್ಮ ಹಕ್ಕು ಎಂದು ಹೇಳಿ ರಾಜಕೀಯ ಮಾಡುತ್ತದೆ. ಆದರೆ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ತಮಿಳುನಾಡಿನ ಪರವಾಗಿ ನಡೆದುಕೊಳ್ಳುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ. ಅಧಿಕಾರದ ಆಸೆ ಹಾಗೂ ರಾಜಕೀಯ ಮೈತ್ರಿಗಾಗಿ ರಾಜ್ಯದ ರೈತರು ಮತ್ತು ಕನ್ನಡಿಗರ ಹಿತವನ್ನು ಬಲಿಕೊಡಲಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಮೇಕೆದಾಟು ಯೋಜನೆಗಾಗಿ ಚುನಾವಣೆಗೂ ಮುನ್ನ ಪಾದಯಾತ್ರೆ ನಡೆಸಿದ ನಾಯಕರು, ಈಗ ನೀರಿನ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ರೈತರು ಹಾಗೂ ಬೆಂಗಳೂರಿನ ಜನರಿಗೆ ಯಾವ ಉತ್ತರ ನೀಡಲಿದ್ದಾರೆ ಎಂದು ಪ್ರಶ್ನಿಸಿರುವ ಅವರು, ಕಾವೇರಿ ಕಣಿವೆಯ ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದ ಜನತೆಗೆ ಕುಡಿಯುವ ನೀರಿನ ಭದ್ರತೆ ಒದಗಿಸಲು ಹಾಗೂ ಕಾವೇರಿ ನೀರಿನ ಹಕ್ಕನ್ನು ರಕ್ಷಿಸಲು ಸರ್ಕಾರ ವಿಫಲವಾಗಿದೆ. ಈ ಸರ್ಕಾರಕ್ಕೆ ರಾಜ್ಯದ ಜನತೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆರ್. ಅಶೋಕ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.