

ಬಳ್ಳಾರಿ, 03 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯಾದ್ಯಂತ ಮುಂಗಾರು ಮಳೆಯಾಗುತ್ತಿದ್ದು ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಮತ್ತು ಭಾರಿ ಮಳೆಯಿಂದ ಉಂಟಾಗುವ ಹಾನಿಗಳನ್ನು ತಡೆಗಟ್ಟಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಹಳೆಯ ಕಚೇರಿ ಸಭಾಂಗಣದಲ್ಲಿ ಮುಂಗಾರು ಪೂರ್ವಸಿದ್ಧತೆ ಹಾಗೂ ಕುಡಿಯುವ ನೀರು ಪೂರೈಕೆ ಕುರಿತು ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮುಂಬರುವ ಮುಂಗಾರು ಮಳೆ ಎದುರಿಸಲು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಅನ್ವಯ, ಮುಂದಿನ ಒಂದು ವಾರಗಳ ಕಾಲ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಇದ್ದು, ಭಾರೀ ಮಳೆ ಅಥವಾ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತವು ಸಂಪೂರ್ಣ ಸನ್ನದ್ಧವಾಗಿದೆ ಎಂದರು.
ಮುಂಗಾರು ಪ್ರವೇಶವಾಗಿದ್ದು, ಜಿಲ್ಲೆಯ ಎಲ್ಲಾ ಪ್ರಮುಖ ಚರಂಡಿಗಳು, ನಾಲಾಗಳು ಮತ್ತು ನೀರು ಹರಿಯುವ ಮಾರ್ಗಗಳ ಹೂಳು ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಲು ಸ್ಥಳೀಯ ಸಂಸ್ಥೆಗಳು ಹಾಗೂ ನೀರಾವರಿ ಇಲಾಖೆ ಮುಂದಾಗಬೇಕು. ಕಲ್ವರ್ಟ್ಗಳಲ್ಲಿನ ಬ್ಲಾಕೇಜ್ಗಳನ್ನು ತೆರವುಗೊಳಿಸಲು ಮತ್ತು ಹಾನಿಗೊಳಗಾದ ಚರಂಡಿ ಸ್ಲ್ಯಾಬ್ಗಳನ್ನು ತಕ್ಷಣ ಬದಲಾಯಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಮಟ್ಟದಲ್ಲಿ 24x7 ಕಾರ್ಯನಿರ್ವಹಿಸುವ ‘ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ' ಹಾಗೂ ನಿಯಂತ್ರಣ ಕೊಠಡಿಗಳನ್ನು ಸಕ್ರಿಯವಾಗಿದೆ. ಮಳೆಯ ತೀವ್ರತೆಯ ಆಧಾರದ ಮೇಲೆ ಹೈ, ಮೀಡಿಯಂ ಮತ್ತು ಲೋ ರಿಸ್ಕ್ ಪ್ರದೇಶಗಳನ್ನು ಗುರುತಿಸಿ ತಕ್ಷಣವೇ ಮುನ್ಸೂಚನೆ ರವಾನಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಲೈಫ್ ಗಾಡ್ರ್ಸ್, ಬೋಟ್ಗಳು, ಲೈಫ್ ಜಾಕೆಟ್ಗಳು ಮತ್ತು ಸುರಕ್ಷತಾ ರೋಪ್ಗಳನ್ನೊಳಗೊಂಡ ರಕ್ಷಣಾ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲು ಅಗ್ನಿಶಾಮಕ, ಪೆÇಲೀಸ್ ಮತ್ತು ಹೋಂಗಾರ್ಡ್ ಇಲಾಖೆಗಳಿಗೆ ಜವಾಬ್ದಾರಿ ವಹಿಸಿದರು.
ಮಳೆಗೆ ಕುಸಿಯಬಹುದಾದ ಹಳೆಯ ಹಾಗೂ ಅಪಾಯಕಾರಿ ಮನೆಗಳನ್ನು ತಾಲೂಕುವಾರು ಗುರುತಿಸಿ, ಅಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಬೇಕು. ನದಿ ಪಾತ್ರದ ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಬೇಕು. ಅದರಂತೆ ಶಿಥಿಲಗೊಂಡ ಹಳೆಯ ಕಟ್ಟಡಗಳ ಶಾಲೆಗಳ ಗೋಡೆ, ಅಂಗನವಾಡಿ ಕೇಂದ್ರಗಳಿದ್ದಲ್ಲಿ ಅಂತಹವುಗಳನ್ನು ಗುರುತಿಸಿ ಕೂಡಲೇ ಸ್ಥಳಾಂತರಿಸಲು ಮುಂದಾಗಬೇಕು ಎಂದರು.
ಪ್ರವಾಹ ಅಥವಾ ತುರ್ತು ಸಂದರ್ಭಗಳಲ್ಲಿ ತಕ್ಷಣವೇ ಕುಡಿಯುವ ನೀರು ಒದಗಿಸಲು ಟ್ಯಾಂಕರ್ಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಹಾಗೂ ಜಿಲ್ಲೆಯ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಏಪ್ರಿಲ್ 1 ರಿಂದ ಮೇ 31 ರವರೆಗಿನ ಮುಂಗಾರು ಪೂರ್ವ ಅವಧಿಯಲ್ಲಿ ಸಂಭವಿಸಿದ ಮಳೆ, ಬಿರುಗಾಳಿ ಹಾಗೂ ಸಿಡಿಲಿನಿಂದ ಉಂಟಾದ ಹಾನಿಗಳ ವಿವರಗಳನ್ನು ಸಭೆಯಲ್ಲಿ ಪರಿಶೀಲಿಸಿದ ಜಿಲ್ಲಾಧಿಕಾರಿಯವರು, ಮನೆ ಹಾನಿ, ಜೀವಹಾನಿ ಹಾಗೂ ಜಾನುವಾರು ಹಾನಿಗೆ ಸಂಬಂಧಿಸಿದಂತೆ ಕೂಡಲೇ ಪರಿಹಾರ ತಲುಪಿಸಬೇಕು ಎಂದರು.
ತಾಲೂಕು ಕಚೇರಿಗಳ ತಂಡಗಳಿಂದ ಹಾನಿಗೊಳಗಾದ ಮನೆಗಳ ಜಂಟಿ ಸಮೀಕ್ಷೆ ನಡೆಸಿ, ಪೂರ್ಣ, ತೀವ್ರ ಹಾಗೂ ಭಾಗಶಃ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿ ಬಾಕಿ ಇರುವ ಪರಿಹಾರ ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕು. ಬಿರುಗಾಳಿ-ಮಳೆಗೆ ಹಾನಿಗೊಳಗಾದ ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್ಫಾರ್ಮರ್ಗಳನ್ನು ತಕ್ಷಣವೇ ದುರಸ್ತಿಗೊಳಿಸಲು ಮತ್ತು ಯಾವುದೇ ವಿಪತ್ತಿನ ಸಂದರ್ಭದಲ್ಲಿ 6 ರಿಂದ 12 ಗಂಟೆಗಳ ಒಳಗಾಗಿ ವಿದ್ಯುತ್ ಸಂಪರ್ಕವನ್ನು ಮರುಸ್ಥಾಪಿಸಬೇಕು. ವಿದ್ಯುತ್ ಸಂಪರ್ಕಕ್ಕೆ ಅಡ್ಡಿಯಾಗುವ ಹಳೆಯ ಮರ- ಕೊಂಬೆಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜೆಸ್ಕಾಮ್, ಅರಣ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯ ರೈತರಿಗೆ ಸಕಾಲದಲ್ಲಿ ರಸಗೊಬ್ಬರ (ಯೂರಿಯಾ ಇತ್ಯಾದಿ) ಹಾಗೂ ಗುಣಮಟ್ಟದ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿಕೊಂಡು ಯಾವುದೇ ಕೊರತೆಯಾಗದಂತೆ ವಿತರಿಸಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ನಿರಂತರ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ನಿಯಮಿತವಾಗಿ ಫಾಂಗಿಂಗ್ ಕಾರ್ಯ ಕೈಗೊಳ್ಳಬೇಕು ಎಂದರು.
ಯಾವುದೇ ಇಲಾಖೆಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಹಶೀಲ್ದಾರರು ಸತತ ಸಂಪರ್ಕದಲ್ಲಿದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್. ಮಂಜುನಾಥ, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಡಿಯೋ ಸಂವಾದದ ಮೂಲಕ ಎಲ್ಲಾ ತಾಲ್ಲೂಕು ತಹಶೀಲ್ದಾರರು, ನಗರ ಸ್ಥಳೀಯ- ಸಂಸ್ಥೆಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್