
ಬೆಂಗಳೂರು, 03 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುತ್ತಿರುವ ಹಿರಿಯ ನಾಯಕ ಯು.ಟಿ.ಖಾದರ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪುನಃ ಪಡೆದರು. ಈ ಹಿನ್ನೆಲೆಯಲ್ಲಿ ಅವರು ಬುಧವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಸದಸ್ಯತ್ವ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.
ಈ ಹಿಂದೆ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದ ವೇಳೆ ಸಂವಿಧಾನಾತ್ಮಕ ಹುದ್ದೆಯ ಗೌರವ ಹಾಗೂ ತಟಸ್ಥತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಖಾದರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಸಭಾಧ್ಯಕ್ಷರಾಗಿ ತಮ್ಮ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ ಇದೀಗ ಮತ್ತೆ ಸಕ್ರಿಯ ರಾಜಕೀಯಕ್ಕೆ ಮರಳಿರುವ ಅವರು ಪಕ್ಷದ ಸದಸ್ಯತ್ವವನ್ನು ಪುನಃ ಸ್ವೀಕರಿಸಿದ್ದಾರೆ.
ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಖಾದರ್ ಅವರಿಗೆ ಸ್ಥಾನ ದೊರೆತಿದ್ದು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಪಕ್ಷದ ನಿಯಮಾನುಸಾರ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಪಡೆಯುವುದು ಅಗತ್ಯವಾಗಿತ್ತು. ಅದಕ್ಕಾಗಿ ಅವರು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಸದಸ್ಯತ್ವ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದರು.
ಕರಾವಳಿ ಭಾಗದ ಪ್ರಭಾವಿ ಮುಸ್ಲಿಂ ನಾಯಕರೆಂದು ಗುರುತಿಸಿಕೊಂಡಿರುವ ಖಾದರ್ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತ ಸಮುದಾಯಕ್ಕೆ ಮಹತ್ವದ ಪ್ರಾತಿನಿಧ್ಯ ನೀಡಿದೆ. ಸದಸ್ಯತ್ವ ಸ್ವೀಕರಿಸಿದ ಬಳಿಕ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.