
ವಿಜಯಪುರ, 03 ಜೂನ್ (ಹಿ.ಸ.) :
ಆಂಕರ್ : ವಿದ್ಯುತ್ ಪೂರೈಕೆಯಲ್ಲಿನ ವ್ಯತ್ಯಯ, ಸುಟ್ಟಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು (ಟಿಸಿ) ತ್ವರಿತವಾಗಿ ಬದಲಾವಣೆ ಮಾಡದಿರುವುದು ಹಾಗೂ ಕೃಷಿ ಸಂಬಂಧಿತ ವಿವಿಧ ಸಮಸ್ಯೆಗಳನ್ನು ಖಂಡಿಸಿ ನೂರಾರು ರೈತರು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೆಸ್ಕಾಂ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ರೈತರ ಸಂಕಷ್ಟಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಸಲ್ಲಿಸಿರುವ 19 ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು, ಕಳೆದ ಹಲವು ದಿನಗಳಿಂದ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದ ಕಾರಣ ಬಿತ್ತನೆ ಮಾಡಿದ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅನೇಕ ಗ್ರಾಮಗಳಲ್ಲಿ ಟ್ರಾನ್ಸ್ಫಾರ್ಮರ್ಗಳು ಸುಟ್ಟು ಹೋಗಿದ್ದರೂ ಅವುಗಳನ್ನು ಬದಲಾಯಿಸುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ ಎಂದು ದೂರಿದರು.
ಪ್ರತಿಭಟನೆಯ ವೇಳೆ ತನ್ನ ಹೊಲದಲ್ಲಿ ಬೆಳೆಗಳು ಒಣಗುತ್ತಿರುವ ಸ್ಥಿತಿಯನ್ನು ವಿವರಿಸುತ್ತಾ ಒಬ್ಬ ರೈತ ಭಾವುಕರಾಗಿ ಕಣ್ಣೀರು ಹಾಕಿದ ಘಟನೆ ಗಮನ ಸೆಳೆಯಿತು. ರೈತರ ಬದುಕು ಕೃಷಿಯ ಮೇಲೆ ಅವಲಂಬಿತವಾಗಿದ್ದು, ವಿದ್ಯುತ್ ಕೊರತೆಯಿಂದ ಬೆಳೆಗಳು ನಾಶವಾಗುತ್ತಿರುವುದು ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಅವರು ಅಳಲು ತೋಡಿಕೊಂಡರು. ಈ ದೃಶ್ಯ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು ಹಾಗೂ ಸಾರ್ವಜನಿಕರ ಮನಸ್ಸನ್ನು ಮಿಡಿಯುವಂತೆ ಮಾಡಿತು.
ರೈತ ಮುಖಂಡರು ಮಾತನಾಡಿ, ಕೃಷಿ ಪಂಪ್ಸೆಟ್ಗಳಿಗೆ ನಿಗದಿತ ಸಮಯದಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು, ಸುಟ್ಟಿರುವ ಟ್ರಾನ್ಸ್ಫಾರ್ಮರ್ಗಳನ್ನು ತಕ್ಷಣ ಬದಲಾಯಿಸಬೇಕು, ಹೊಸ ಸಂಪರ್ಕಗಳಿಗೆ ಅನುಮೋದನೆ ನೀಡಬೇಕು, ವಿದ್ಯುತ್ ತಂತಿ ಹಾಗೂ ಕಂಬಗಳ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಸೇರಿದಂತೆ ಒಟ್ಟು 19 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟರು.
ಪ್ರತಿಭಟನೆಯ ಸಂದರ್ಭದಲ್ಲಿ ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಸಮಸ್ಯೆಗಳ ಬಗ್ಗೆ ಸರ್ಕಾರ ಹಾಗೂ ಉನ್ನತ ಅಧಿಕಾರಿಗಳ ಗಮನ ಸೆಳೆದು ಶೀಘ್ರ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಯಿತು. ಬೇಡಿಕೆಗಳನ್ನು ಈಡೇರಿಸುವ ಕುರಿತು ಅಧಿಕಾರಿಗಳು ಸಕಾರಾತ್ಮಕ ಭರವಸೆ ನೀಡಿದರೂ, ನಿಗದಿತ ಅವಧಿಯೊಳಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ವಿವಿಧ ರೈತ ಸಂಘಟನೆಗಳ ಪದಾಧಿಕಾರಿಗಳು, ರೈತ ಮುಖಂಡರು, ಗ್ರಾಮಗಳ ರೈತರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ರೈತರ ಸಮಸ್ಯೆಗಳ ಕುರಿತು ಸರ್ಕಾರ ಮತ್ತು ವಿದ್ಯುತ್ ಇಲಾಖೆಯು ತುರ್ತು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಪ್ರತಿಭಟನೆಯ ಪ್ರಮುಖ ಅಂಶವಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / jyothi deshpande