
ವಿಜಯಪುರ, 03 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ನಗರಸಭೆ ವ್ಯಾಪ್ತಿಯ ಕಲ್ಯಾಣನಗರದ ವಾರ್ಡ್ ಸಂಖ್ಯೆ 18ರಲ್ಲಿ ಚರಂಡಿ ನೀರು ಮುಖ್ಯ ರಸ್ತೆಯ ಮೇಲೆ ಹರಿಯುತ್ತಿರುವ ಪರಿಣಾಮ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವು ದಿನಗಳಿಂದ ಕೊಳಚೆ ನೀರು ರಸ್ತೆಯ ಮೇಲೆಯೇ ನಿಂತು ಹರಿಯುತ್ತಿದ್ದು, ವಾಹನ ಸವಾರರು, ಪಾದಚಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಪರದಾಡುವಂತಾಗಿದೆ.
ಕಲ್ಯಾಣನಗರದ ಪ್ರಮುಖ ರಸ್ತೆಯಲ್ಲೇ ಚರಂಡಿ ನೀರು ಹರಿಯುತ್ತಿರುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ದುರ್ವಾಸನೆ ಆವರಿಸಿದೆ. ಶಾಲಾ ಮಕ್ಕಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಇದೇ ರಸ್ತೆಯಲ್ಲಿ ಸಂಚರಿಸಬೇಕಾಗಿರುವುದರಿಂದ ತೊಂದರೆ ಮತ್ತಷ್ಟು ಹೆಚ್ಚಾಗಿದೆ. ಮಳೆ ಬಂದಾಗ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತಿದ್ದು, ರಸ್ತೆ ಮತ್ತು ಚರಂಡಿ ನೀರು ಒಂದಾಗಿ ಸಂಚಾರಕ್ಕೂ ಅಡ್ಡಿಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಚರಂಡಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಇಲ್ಲದಿರುವುದೇ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆ ಪರಿಹಾರವಾಗಿಲ್ಲ ಎನ್ನುವ ಅಸಮಾಧಾನ ನಿವಾಸಿಗಳಲ್ಲಿದೆ. ನಗರದ ಅಭಿವೃದ್ಧಿ ಮತ್ತು ಸ್ವಚ್ಛತೆಗೆ ಕೋಟ್ಯ0ತರ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದ್ದರೂ, ಮೂಲಭೂತ ಸೌಕರ್ಯಗಳ ಕೊರತೆ ಮಾತ್ರ ಮುಂದುವರಿದಿದೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಕೊಳಚೆ ನೀರು ರಸ್ತೆ ಮೇಲೆ ನಿಂತಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದ್ದು, ಡೆಂಗ್ಯೂ, ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಅಲ್ಲದೆ, ರಸ್ತೆ ಹಾಳಾಗುತ್ತಿರುವ ಕಾರಣ ವಾಹನ ಸವಾರರು ಅಪಘಾತದ ಆತಂಕದಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ಉಂಟಾಗಿದೆ.
ಸ್ಥಳೀಯ ನಿವಾಸಿಗಳು ನಗರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಮಸ್ಯೆ ಮುಂದುವರಿದರೆ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಒಟ್ಟಾರೆ, ಸಿಂದಗಿ ಪಟ್ಟಣದ ಕಲ್ಯಾಣನಗರ ವಾರ್ಡ್ ನಂ.18ರಲ್ಲಿ ಚರಂಡಿ ನೀರಿನ ಸಮಸ್ಯೆ ಸಾರ್ವಜನಿಕರ ಆರೋಗ್ಯ ಮತ್ತು ಸಂಚಾರಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದ್ದು, ನಗರಸಭೆ ಆಡಳಿತ ತುರ್ತು ಕ್ರಮ ಕೈಗೊಳ್ಳಬೇಕೆಂಬುದು ಸ್ಥಳೀಯರ ಆಗ್ರಹವಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande