
ವಿಜಯಪುರ, 03 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಕುಂಬಾರ ಹೋಟೆಲ್ ನಲ್ಲಿ ಸಂಭವಿಸಿದ್ದ ಗ್ಯಾಸ್ ಸೋರಿಕೆ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ತಾಳಿಕೋಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ದುಃಖದ ವಾತಾವರಣ ಉಂಟಾಗಿದೆ.
ಕಳೆದ ಮೇ 29, 2026ರಂದು ತಾಳಿಕೋಟಿ ಪಟ್ಟಣದ ಕುಂಬಾರ ಹೋಟೆಲ್ಗೆ ಚಹಾ ಸೇವಿಸಲು ಬಂದಿದ್ದ ವೇಳೆ ಅಡುಗೆ ಅನಿಲ ಸೋರಿಕೆಯಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿ ಹೋಟೆಲ್ ನಲ್ಲಿದ್ದ ಒಟ್ಟು ಎಂಟು ಜನರು ಸುಟ್ಟ ಗಾಯಗಳಿಗೆ ಒಳಗಾಗಿದ್ದರು. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಗಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.
ಗಾಯಗೊಂಡವರಲ್ಲಿ ಮೂವರು ಗಂಭೀರವಾಗಿ ಸುಟ್ಟಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಂಡ ಹಲವು ದಿನಗಳ ಕಾಲ ನಿರಂತರ ಚಿಕಿತ್ಸೆ ನೀಡಿದರೂ, ಗಂಭೀರವಾಗಿ ಗಾಯಗೊಂಡಿದ್ದ ಬಶೀರ್ ಅಹ್ಮದ್ ಲಾಲ್ಸಾಬ್ ಕಡದಾರಲ್ ಹಾಗೂ ಶಕೀಲ್ ಅಹ್ಮದ್ ಕುಂಬಾರವಾಡಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಬ್ಬರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತಾಳಿಕೋಟಿ ಪಟ್ಟಣದಲ್ಲಿ ಶೋಕದ ಛಾಯೆ ಆವರಿಸಿದೆ. ಮೃತರು ಸಮಾಜದಲ್ಲಿ ಉತ್ತಮ ಹೆಸರು ಗಳಿಸಿಕೊಂಡಿದ್ದವರಾಗಿದ್ದು, ಅವರ ನಿಧನಕ್ಕೆ ನಾನಾ ಸಂಘಟನೆಗಳ ಮುಖಂಡರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.
ಇನ್ನೂ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ವೈದ್ಯರು ನಿಗಾ ವಹಿಸಿದ್ದಾರೆ. ಗ್ಯಾಸ್ ಸೋರಿಕೆ ಹೇಗೆ ಸಂಭವಿಸಿತು ಹಾಗೂ ಸುರಕ್ಷತಾ ಕ್ರಮಗಳಲ್ಲಿ ಯಾವುದೇ ನಿರ್ಲಕ್ಷ್ಯವಾಗಿದೆಯೇ ಎಂಬ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಈ ದುರ್ಘಟನೆಯು ವ್ಯಾಪಾರಿಕ ಸಂಸ್ಥೆಗಳು ಹಾಗೂ ಹೋಟೆಲ್ಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವನ್ನು ಮತ್ತೊಮ್ಮೆ ಮನವರಿಕೆ ಮಾಡಿಕೊಟ್ಟಿದೆ. ಸ್ಥಳೀಯರು ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ನೆರವು ಒದಗಿಸುವಂತೆ ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande