ರಾಂಪುರ ಆರ್ಸಿ ಬಸ್ ನಿಲ್ದಾಣ ಆವರಣದ ಅನಧಿಕೃತ ಅಂಗಡಿ ತೆರವು
ವಿಜಯಪುರ, 03 ಜೂನ್ (ಹಿ.ಸ.) : ಆಂಕರ್ : ಸಾರ್ವಜನಿಕ ಸ್ಥಳಗಳ ಸುಸಂಘಟಿತ ನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಅಡಚಣೆಯಾಗಿದ್ದ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲೆಯ ರಾಂಪುರ ಆರ್ಸಿ ಬಸ್ ನಿಲ್ದಾಣ ಆವರಣದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, ಅನಧಿಕೃತ
ತೆರವು


ವಿಜಯಪುರ, 03 ಜೂನ್ (ಹಿ.ಸ.) :

ಆಂಕರ್ : ಸಾರ್ವಜನಿಕ ಸ್ಥಳಗಳ ಸುಸಂಘಟಿತ ನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಅಡಚಣೆಯಾಗಿದ್ದ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲೆಯ ರಾಂಪುರ ಆರ್ಸಿ ಬಸ್ ನಿಲ್ದಾಣ ಆವರಣದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, ಅನಧಿಕೃತವಾಗಿ ನಿರ್ಮಿಸಲಾಗಿದ್ದ ಅಂಗಡಿಗಳನ್ನು ನೆಲಸಮಗೊಳಿಸಲಾಯಿತು.

ಪುನರ್ವಸತಿ ಅಧಿಕಾರಿಗಳ ಕಚೇರಿ, ಕೃಷ್ಣಾ ಮೇಲ್ದಂಡೆ ಯೋಜನೆ (UKP), ಬಾಗಲಕೋಟೆ ಇವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ಜರುಗಿತು.

ಬಸ್ ನಿಲ್ದಾಣ ಆವರಣದ ಸರ್ಕಾರಿ ಜಾಗದಲ್ಲಿ ಅನುಮತಿಯಿಲ್ಲದೆ ನಿರ್ಮಾಣಗೊಂಡಿದ್ದ ಅಂಗಡಿಗಳು ಹಾಗೂ ತಾತ್ಕಾಲಿಕ ಕಟ್ಟಡಗಳು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟು ಮಾಡುತ್ತಿದ್ದು, ಯೋಜನಾ ಕಾಮಗಾರಿಗಳ ಅನುಷ್ಠಾನಕ್ಕೂ ಅಡಚಣೆಯಾಗಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಯಿತು.

ಕಾರ್ಯಾಚರಣೆಗೆ ಮುನ್ನ ಸಂಬಂಧಿಸಿದ ಅಂಗಡಿ ಮಾಲೀಕರಿಗೆ ನಿಯಮಾನುಸಾರ ನೋಟಿಸ್ ನೀಡಲಾಗಿದ್ದು, ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ಅವಕಾಶ ಕಲ್ಪಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದರು. ಆದಾಗ್ಯೂ, ನಿಗದಿತ ಅವಧಿಯೊಳಗೆ ತೆರವುಗೊಳಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜೆಸಿಬಿ ಯಂತ್ರಗಳ ಸಹಾಯದಿಂದ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿದರು.

ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

ಅಧಿಕಾರಿಗಳ ಸಮ್ಮುಖದಲ್ಲಿ ಶಾಂತಿಯುತವಾಗಿ ತೆರವು ಕಾರ್ಯ ನಡೆಯಿತು. ಸಾರ್ವಜನಿಕ ಆಸ್ತಿಯನ್ನು ಸಂರಕ್ಷಿಸುವುದು ಮತ್ತು ಯೋಜನಾ ಪ್ರದೇಶಗಳಲ್ಲಿ ಕಾನೂನುಬದ್ಧ ಅಭಿವೃದ್ಧಿ ಕಾರ್ಯಗಳಿಗೆ ಅವಕಾಶ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಅನಧಿಕೃತ ಅತಿಕ್ರಮಣಗಳ ವಿರುದ್ಧ ಮುಂದೆಯೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು.

ಸ್ಥಳೀಯರು ಸಾರ್ವಜನಿಕ ಸೌಲಭ್ಯಗಳ ಅಭಿವೃದ್ಧಿಗೆ ಸಹಕಾರ ನೀಡಬೇಕು ಹಾಗೂ ಸರ್ಕಾರಿ ಜಾಗಗಳಲ್ಲಿ ಯಾವುದೇ ರೀತಿಯ ಅನಧಿಕೃತ ನಿರ್ಮಾಣಗಳನ್ನು ಕೈಗೊಳ್ಳಬಾರದು ಎಂದು ಮನವಿ ಮಾಡಲಾಯಿತು. ರಾಂಪುರ ಬಸ್ ನಿಲ್ದಾಣ ಪ್ರದೇಶವನ್ನು ಸುಸಜ್ಜಿತಗೊಳಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಈ ಕಾರ್ಯಾಚರಣೆಯಲ್ಲಿ ಪುನರ್ವಸತಿ ಇಲಾಖೆಯ ಅಧಿಕಾರಿಗಳು, ಕೃಷ್ಣಾ ಮೇಲ್ದಂಡೆ ಯೋಜನೆಯ ಸಿಬ್ಬಂದಿ, ಸ್ಥಳೀಯ ಆಡಳಿತದ ಪ್ರತಿನಿಧಿಗಳು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande