ಡಿಕೆಶಿ ಪ್ರಮಾಣ ವಚನಕ್ಕೆ ಅಭೂತಪೂರ್ವ ಭದ್ರತೆ
ಬೆಂಗಳೂರು, 03 ಜೂನ್ (ಹಿ.ಸ.) : ಆ್ಯಂಕರ್ : ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸಮಾರಂಭದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಸಮಾರಂಭದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಲೋಕಭವನ ಮತ್ತು ಅದರ ಸ
ಸೀಮಂತಕುಮಾರ ಸಿಂಗ್


ಬೆಂಗಳೂರು, 03 ಜೂನ್ (ಹಿ.ಸ.) :

ಆ್ಯಂಕರ್ : ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸಮಾರಂಭದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಸಮಾರಂಭದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಲೋಕಭವನ ಮತ್ತು ಅದರ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣವಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಪ್ರಮಾಣ ವಚನ ಸಮಾರಂಭಕ್ಕೆ ದೇಶದ ವಿವಿಧ ರಾಜ್ಯಗಳಿಂದ ಗಣ್ಯರು, ಅತಿಗಣ್ಯರು ಹಾಗೂ ಕಾಂಗ್ರೆಸ್ನ ರಾಷ್ಟ್ರೀಯ ನಾಯಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಲೋಕಭವನ ಪ್ರವೇಶಕ್ಕೆ ವಿಶೇಷ ಪಾಸ್ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ನೀಡಿರುವ ಮಾರ್ಗಸೂಚಿಗಳ ಅನುಸಾರ ಅಗತ್ಯ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

2,300 ಪೊಲೀಸರ ಭದ್ರತಾ ಕವಚ :

ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಾಗೂ ಯಾವುದೇ ಭದ್ರತಾ ಲೋಪ ಉಂಟಾಗದಂತೆ ಪ್ರಮಾಣವಚನ ಸಮಾರಂಭಕ್ಕಾಗಿ ಸಂಚಾರ ಪೊಲೀಸ್ ಸಿಬ್ಬಂದಿ ಸೇರಿದಂತೆ ಸುಮಾರು 2,300 ಪೊಲೀಸರನ್ನು ನಿಯೋಜಿಸಲಾಗಿದೆ. ಐಜಿ, ಡಿಐಜಿ, ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭದ್ರತಾ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸಿದ್ದು, ನಗರದ ಪ್ರಮುಖ ಪ್ರದೇಶಗಳಲ್ಲಿ ತೀವ್ರ ನಿಗಾವಹಿಸಲಾಗಿದೆ.

ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ :

ಲೋಕ ಭವನ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ.

ಸಮಾರಂಭಕ್ಕೆ ಆಗಮಿಸುವ ಗಣ್ಯರ ವಾಹನ ಸಂಚಾರ ಸುಗಮವಾಗಲು ವಿಶೇಷ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.

ನೋ-ಫ್ಲೈಯಿಂಗ್ ಝೋನ್’ ಘೋಷಣೆ: ಪ್ರಮಾಣವಚನ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಇಲಾಖೆ ವಿಶೇಷ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಶಾಂಗ್ರಿಲಾ ಹೋಟೆಲ್ ಹಾಗೂ ಕೆಪಿಸಿಸಿ ಕಚೇರಿ ಸುತ್ತಮುತ್ತ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ತಾತ್ಕಾಲಿಕವಾಗಿ ‘ನೋ-ಫ್ಲೈಯಿಂಗ್ ಝೋನ್’ ಎಂದು ಘೋಷಿಸಲಾಗಿದೆ.

ಈ ವ್ಯಾಪ್ತಿಯಲ್ಲಿ ಡ್ರೋನ್ಗಳು, ಸಣ್ಣ ವಿಮಾನಗಳು ಹಾಗೂ ಇತರೆ ಹಾರುವ ಸಾಧನಗಳ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಭದ್ರತಾ ಕಾರಣಗಳಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande