
ಬಾಗಲಕೋಟೆ, 03 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ವಿಧಾನಸಭಾ ಕ್ಷೇತ್ರದ ಚಿಂಚಲಕಟ್ಟಿ ಗ್ರಾಮದ ರೈತರಾದ ಹುಸೇನಸಾಬ್ ಮಾಲದಾರ ಅವರ ಕೃಷಿ ಹೊಲದಲ್ಲಿ ಗ್ರಾಮದ ಕೊಳಚೆ ನೀರು ಸಂಗ್ರಹವಾಗಿ, ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಕ್ಕೆ ತೀವ್ರ ಅಡಚಣೆ ಉಂಟಾಗಿರುವ ಹಿನ್ನೆಲೆಯಲ್ಲಿ ಫಕೀರ ಬೂದಿಹಾಳ ಗ್ರಾಮ ಪಂಚಾಯಿತಿ ಕಚೇರಿ ಎದುರು ಗ್ರಾಮಸ್ಥರು ಹಾಗೂ ರೈತರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ವಿವಿಧ ಭಾಗಗಳಿಂದ ಹರಿದು ಬರುತ್ತಿರುವ ಕೊಳಚೆ ನೀರು ರೈತರ ಕೃಷಿ ಭೂಮಿಯಲ್ಲಿ ನಿಂತುಕೊಳ್ಳುತ್ತಿರುವುದರಿಂದ ಬೆಳೆ ಬೆಳೆಯಲು ಅಗತ್ಯವಾದ ಭೂಮಿಯು ಹಾಳಾಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈಗಾಗಲೇ ಬಿತ್ತನೆ ಹಂಗಾಮು ಆರಂಭವಾಗಿರುವುದರಿಂದ ಹೊಲದಲ್ಲಿ ನೀರು ನಿಂತಿರುವ ಕಾರಣ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.
ಈ ಸಮಸ್ಯೆಯನ್ನು ತಾತ್ಕಾಲಿಕವಾಗಿ ಅಲ್ಲದೆ ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ರೈತನ ಹೊಲದಲ್ಲಿ ಸಂಗ್ರಹವಾಗುತ್ತಿರುವ ಕೊಳಚೆ ನೀರನ್ನು ಬೇರೆಡೆಗೆ ಹರಿಸಿ ಸೂಕ್ತ ಸ್ಥಳದಲ್ಲಿ ಕೃಷಿ ಹೊಂಡ ನಿರ್ಮಿಸಿ ನೀರು ಸಂಗ್ರಹಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.
ಕೃಷಿ ಹೊಂಡ ನಿರ್ಮಾಣದಿಂದ ಹೊಲದಲ್ಲಿ ನೀರು ನಿಲ್ಲುವುದು ತಪ್ಪುವುದಲ್ಲದೆ, ರೈತರ ಕೃಷಿ ಭೂಮಿಯೂ ರಕ್ಷಣೆ ಪಡೆಯಲಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು.
ಪ್ರತಿಭಟನೆಯ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರೈತರು ಹಾಗೂ ಗ್ರಾಮಸ್ಥರ ಮನವಿಯನ್ನು ಆಲಿಸಿದರು.
ಸಮಸ್ಯೆಯ ಗಂಭೀರತೆಯನ್ನು ಮನಗಂಡ ಅಧಿಕಾರಿಗಳು ಕೃಷಿ ಹೊಂಡ ನಿರ್ಮಾಣಕ್ಕೆ ಅಗತ್ಯವಿರುವ ವೆಚ್ಚದ ಅಂದಾಜು ಹಾಗೂ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಶೀಘ್ರದಲ್ಲಿಯೇ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಶಾಶ್ವತ ಪರಿಹಾರ ಒದಗಿಸುವುದು ಗ್ರಾಮ ಪಂಚಾಯಿತಿಯ ಜವಾಬ್ದಾರಿಯಾಗಿದೆ. ಅಧಿಕಾರಿಗಳು ನೀಡಿರುವ ಭರವಸೆ ಕೇವಲ ಮಾತಿನಲ್ಲೇ ಉಳಿಯದೇ ನಿಗದಿತ ಅವಧಿಯೊಳಗೆ ಅನುಷ್ಠಾನಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಚಿಂಚಲಕಟ್ಟಿ ಹಾಗೂ ಫಕೀರ ಬೂದಿಹಾಳ ಗ್ರಾಮದ ಮುಖಂಡರು, ರೈತರು, ಯುವಕರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೈತರ ಪರವಾಗಿ ಬೆಂಬಲ ವ್ಯಕ್ತಪಡಿಸಿದರು. ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊಳಚೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande