ಜೀವಜಲಕ್ಕಾಗಿ ಇಳಕಲ್ ಜನರ ಹಾಹಾಕಾರ ; ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ!
ಬಾಗಲಕೋಟೆ, 03 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಂಡಿದ್ದು, ಕಳೆದ 15 ದಿನಗಳಿಂದ ಸಮರ್ಪಕ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Watwr


ಬಾಗಲಕೋಟೆ, 03 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಂಡಿದ್ದು, ಕಳೆದ 15 ದಿನಗಳಿಂದ ಸಮರ್ಪಕ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಲಿ ಕೊಡಗಳನ್ನು ಹಿಡಿದು ನೂರಾರು ಮಹಿಳೆಯರು ರಸ್ತೆಗಿಳಿದು ಬೃಹತ್ ಪ್ರತಿಭಟನೆ ನಡೆಸಿ, ಇಳಕಲ್ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಅಸಮಾಧಾನ ಹೊರಹಾಕಿದರು.

ನಗರದ ವಾರ್ಡ್ ಸಂಖ್ಯೆ 3 ಸೇರಿದಂತೆ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿರುವುದರಿಂದ ಜನರು ಪರದಾಡುವಂತಾಗಿದೆ. ಬಿರು ಬೇಸಿಗೆಯ ತಾಪಮಾನ ಏರಿಕೆಯಾಗಿರುವ ಈ ಸಂದರ್ಭದಲ್ಲಿ ಕುಡಿಯುವ ನೀರಿಗೂ ತೊಂದರೆ ಎದುರಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮನೆ ಬಳಕೆಯ ನೀರಿಗಾಗಿ ಜನರು ದೂರದ ಪ್ರದೇಶಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.

ಸಮಸ್ಯೆ ಕುರಿತು ಹಲವು ಬಾರಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮಹಿಳೆಯರು ನೇರವಾಗಿ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿದರು.

ಪ್ರತಿಭಟನಾಕಾರರು ಕಚೇರಿ ಬಾಗಿಲು ಮುಚ್ಚಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಹಾಕಿದರು. ಈ ವೇಳೆ ಕೆಲ ಕಾಲ ಸಾರ್ವಜನಿಕರು ಹಾಗೂ ಸಿಬ್ಬಂದಿ ನಡುವೆ ವಾಗ್ವಾದ ಮತ್ತು ತಳ್ಳಾಟ-ನೂಕಾಟ ನಡೆದಿರುವುದಾಗಿ ತಿಳಿದು ಬಂದಿದೆ.

ಸುಮಾರು ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಇಳಕಲ್ ನಗರದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಬಗ್ಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಕುಡಿಯುವ ನೀರಿನ ಸಮಸ್ಯೆ ನಿರಂತರವಾಗಿ ಕಾಡುತ್ತಿದ್ದರೂ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಜಿಲ್ಲಾಡಳಿತ ಮತ್ತು ನಗರಸಭೆ ವಿಫಲವಾಗಿವೆ ಎಂಬ ಆರೋಪ ಕೇಳಿ ಬಂದಿದೆ.

ಪ್ರತಿ ಬಾರಿ ನೀರಿನ ಸಮಸ್ಯೆ ತಲೆದೋರಿದಾಗ ಜನರು ರಸ್ತೆಗಿಳಿದು ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿಂದೆ ಕೂಡ ಸಾರ್ವಜನಿಕರು ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಿ ತಮ್ಮ ಅಸಮಾಧಾನ ಹೊರಹಾಕಿದ್ದರು. ಆದರೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗದ ಕಾರಣ ಜನರ ಅಸಹನೆ ಮತ್ತಷ್ಟು ಹೆಚ್ಚಾಗಿದೆ.

ಇದೇ ವೇಳೆ, ಕ್ಷೇತ್ರದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿರುವಾಗ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಸಚಿವ ಸಂಪುಟ ಸೇರ್ಪಡೆಗಾಗಿ ಬೆಂಗಳೂರಿನಲ್ಲಿ ರಾಜಕೀಯ ಲಾಬಿ ನಡೆಸುತ್ತಿದ್ದಾರೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿರುವುದಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ನಮಗೆ ರಾಜಕೀಯ ಬೇಡ, ಮೊದಲು ನೀರು ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದು, ತಕ್ಷಣವೇ ನೀರಿನ ಪೂರೈಕೆ ಪುನರಾರಂಭಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಮಸ್ಯೆ ಪರಿಹಾರವಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ, ಇಳಕಲ್ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಜನರ ಆಕ್ರೋಶ ಆಡಳಿತ ವ್ಯವಸ್ಥೆಯ ವೈಫಲ್ಯವನ್ನು ಬಯಲಿಗೆಳೆಯುತ್ತಿದೆ. ಈಗಾದರೂ ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಜನರ ಮೂಲಭೂತ ಅಗತ್ಯಕ್ಕೆ ಸ್ಪಂದಿಸುತ್ತಾರೆಯೇ ಎಂಬುದನ್ನು ಕಾದುನೋಡಬೇಕಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande