
ಬೆಂಗಳೂರು, 30 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಮೂಲಸೌಕರ್ಯ ಮತ್ತು ರಸ್ತೆ ಅಭಿವೃದ್ಧಿಗಾಗಿ ಘೋಷಿಸಲಾದ ₹2,000 ಕೋಟಿ ವಿಶೇಷ ಪ್ಯಾಕೇಜ್ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ಬಿಜೆಪಿ ಶಾಸಕರಿರುವ ಕ್ಷೇತ್ರಗಳ ವಿರುದ್ಧ ತಾರತಮ್ಯ ಎಸಗಿದೆ ಎಂದು ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ನೀವು ಇಡೀ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಕೇವಲ ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳ ಮುಖ್ಯಮಂತ್ರಿಗಳೋ? ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ನೂರಾರು ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು, ಬಿಜೆಪಿ ಶಾಸಕರಿರುವ ಬೆಂಗಳೂರಿನ 16 ವಿಧಾನಸಭಾ ಕ್ಷೇತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಅವರು ಆರೋಪಿಸಿದರು. ಬಿಜೆಪಿ ಕ್ಷೇತ್ರಗಳಿಗೆ ಅತ್ಯಲ್ಪ ಅನುದಾನ ನೀಡಿ ತಾರತಮ್ಯ ಮಾಡಲಾಗಿದೆ ಎಂದು ಟೀಕಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ಉದ್ದೇಶಿಸಿ ಮಾತನಾಡಿರುವ ಅಶೋಕ್, ಬಿಜೆಪಿ ಶಾಸಕರಿರುವ ಕ್ಷೇತ್ರಗಳ ನಿವಾಸಿಗಳು ಸರ್ಕಾರಕ್ಕೆ ತೆರಿಗೆ ಪಾವತಿಸುವುದಿಲ್ಲವೇ? ಅವರಿಗೆ ರಸ್ತೆ ಹಾಗೂ ಮೂಲಸೌಕರ್ಯ ಅಗತ್ಯವಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಈ ರೀತಿಯ ರಾಜಕೀಯ ದ್ವೇಷದಿಂದ ಕೈಗೊಂಡಿರುವ ನಿರ್ಧಾರವು ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರದ ತಾರತಮ್ಯದ ಆಡಳಿತ ಮತ್ತು ಪಕ್ಷಪಾತದ ಧೋರಣೆಯನ್ನು ಬೆಂಗಳೂರಿನ ಜನರು ಗಮನಿಸುತ್ತಿದ್ದು, ಮುಂಬರುವ ಜಿಬಿಎ (ಗ್ರೇಟರ್ ಬೆಂಗಳೂರು ಅಥಾರಿಟಿ) ಚುನಾವಣೆಯಲ್ಲಿ ಜನತೆ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆರ್. ಅಶೋಕ್ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.