
ಶಿವಮೊಗ್ಗ, 30 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯಾದ್ಯಂತ ಇಂದಿನಿಂದ ಜುಲೈ 29ರವರೆಗೆ ನಡೆಯಲಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಮನೆ-ಮನೆ ಸಮೀಕ್ಷೆ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶಿಕಾರಿಪುರದಲ್ಲಿರುವ ತಮ್ಮ ನಿವಾಸದಲ್ಲಿ ಚುನಾವಣಾ ಆಯೋಗದಿಂದ ನಿಯೋಜಿಸಲಾದ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ಸಲ್ಲಿಸುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯು ನಿಖರ ಹಾಗೂ ಸಮರ್ಪಕವಾಗಿರುವುದು ಪ್ರಜಾಪ್ರಭುತ್ವದ ಬಲಿಷ್ಠ ಅಡಿಪಾಯವಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರರೂ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ನಿಮ್ಮ ಮನೆಗೂ ಭೇಟಿ ನೀಡುವ ಬಿಎಲ್ಒಗಳಿಗೆ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ಒದಗಿಸಿ, ನಿಮ್ಮ ಹೆಸರು ಹಾಗೂ ವೈಯಕ್ತಿಕ ವಿವರಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಿ. ಮತದಾನದ ಹಕ್ಕು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಅತ್ಯಗತ್ಯ ಎಂದು ಅವರು ತಿಳಿಸಿದರು.
ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ. ಆದ್ದರಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಎಲ್ಲರೂ ತಪ್ಪದೇ ಪಾಲ್ಗೊಂಡು ಪ್ರಜಾಪ್ರಭುತ್ವದ ಸುಭದ್ರ ಅಡಿಪಾಯವನ್ನು ಇನ್ನಷ್ಟು ಸದೃಢಗೊಳಿಸಬೇಕು ಎಂದು ವಿಜಯೇಂದ್ರ ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.