
ಬೆಂಗಳೂರು, 30 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಅರ್ಹ ಮತದಾರರು ಸಹಕರಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.
ಇಂದಿನಿಂದ ಜುಲೈ 29ರವರೆಗೆ ನಡೆಯಲಿರುವ ಮನೆ-ಮನೆ ಸಮೀಕ್ಷೆ (ಎನ್ಯುಮರೇಷನ್) ಹಿನ್ನೆಲೆಯಲ್ಲಿ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬ ಸದಸ್ಯರೊಂದಿಗೆ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ನೀಡಿ ತಾವು ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾಗಿ ಅವರು ತಿಳಿಸಿದ್ದಾರೆ.
ರಾಜ್ಯದ ಎಲ್ಲ ನಾಗರಿಕರು ಹಾಗೂ ಅರ್ಹ ಮತದಾರರು ತಮ್ಮ ಮನೆಗಳಿಗೆ ಆಗಮಿಸುವ ಬಿಎಲ್ಒಗಳಿಗೆ ಸಂಪೂರ್ಣ ಸಹಕಾರ ನೀಡಬೇಕು. ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ಒದಗಿಸುವ ಮೂಲಕ ತಮ್ಮ ವಿವರಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
ಪ್ರಜಾಪ್ರಭುತ್ವವು ಕೇವಲ ಒಂದು ಆಡಳಿತ ವ್ಯವಸ್ಥೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಧ್ವನಿಯಾಗಿದೆ. ಆ ಧ್ವನಿಗೆ ಶಕ್ತಿ ತುಂಬುವುದು ಮತದಾನದ ಹಕ್ಕು. ಪ್ರತಿಯೊಬ್ಬರು ಚಲಾಯಿಸುವ ಮತ ದೇಶದ ಭವಿಷ್ಯವನ್ನು ರೂಪಿಸುವುದರ ಜೊತೆಗೆ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಪವಿತ್ರ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಮತದಾನದ ಹಕ್ಕು ಉಳಿಸಿಕೊಳ್ಳಲು ಅಗತ್ಯ ದಾಖಲೆಗಳನ್ನು ಸಲ್ಲಿಸಿ, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.