
ಬೆಂಗಳೂರು, 30 ಜೂನ್ (ಹಿ.ಸ.) :
ಆ್ಯಂಕರ್ : ಮತದಾರರ ಪಟ್ಟಿಯನ್ನು ಇನ್ನಷ್ಟು ಸಮಗ್ರ, ನಿಖರ ಹಾಗೂ ನವೀಕೃತಗೊಳಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್–2026) ಅಭಿಯಾನಕ್ಕೆ ರಾಜ್ಯದಲ್ಲಿ ಚಾಲನೆ ಸಿಕ್ಕಿದೆ.
ಅಭಿಯಾನದ ಭಾಗವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಮನೆ ಮನೆಗೆ ಭೇಟಿ ನೀಡಿ ಅರ್ಹ ಮತದಾರರಿಗೆ ಗಣತಿ ನಮೂನೆಗಳನ್ನು (ಎನ್ಯುಮರೇಷನ್ ಫಾರ್ಮ್) ವಿತರಿಸುವ ಹಾಗೂ ಭರ್ತಿ ಮಾಡಿದ ನಮೂನೆಗಳನ್ನು ಸಂಗ್ರಹಿಸುವ ಕಾರ್ಯವನ್ನು ಆರಂಭಿಸಿದ್ದಾರೆ.
ಮತದಾರರ ವಿವರಗಳನ್ನು ನಿಖರವಾಗಿ ಪರಿಶೀಲಿಸುವುದು, ಹೊಸದಾಗಿ ಮತದಾರರಾಗಲು ಅರ್ಹರಾದವರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು, ವಿಳಾಸ ಅಥವಾ ಇತರ ವಿವರಗಳಲ್ಲಿ ಬದಲಾವಣೆಗಳಿದ್ದರೆ ಅವುಗಳನ್ನು ದಾಖಲಿಸುವುದು ಹಾಗೂ ಮತದಾರರ ಪಟ್ಟಿಯಲ್ಲಿರುವ ಮಾಹಿತಿಯನ್ನು ಪರಿಷ್ಕರಿಸುವ ಉದ್ದೇಶದಿಂದ ಈ ಮನೆ-ಮನೆ ಭೇಟಿ ಕಾರ್ಯಕ್ರಮ ನಡೆಸಲಾಗುತ್ತಿದೆ.
ಮತಗಟ್ಟೆ ಮಟ್ಟದ ಅಧಿಕಾರಿಗಳು ನಾಗರಿಕರಿಗೆ ಅಗತ್ಯ ಮಾಹಿತಿ ನೀಡುವುದರ ಜೊತೆಗೆ ಗಣತಿ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡುವ ಬಗ್ಗೆಯೂ ಮಾರ್ಗದರ್ಶನ ನೀಡುತ್ತಿದ್ದಾರೆ.
ಈ ಅಭಿಯಾನದ ಅಂಗವಾಗಿ ಮಂಗಳವಾರ ಬೆಳಿಗ್ಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರಿಗೆ ಬಿಎಲ್ಒಗಳು ಗಣತಿ ನಮೂನೆಯನ್ನು ವಿತರಿಸಿದರು. ಬಳಿಕ ಅವರು ಭರ್ತಿ ಮಾಡಿದ ನಮೂನೆಯನ್ನು ಅಧಿಕಾರಿಗಳು ಸ್ವೀಕರಿಸಿದರು. ಈ ಮೂಲಕ ತುಷಾರ್ ಗಿರಿನಾಥ್ ಮತದಾರರ ಪರಿಶೀಲನಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಸಾರ್ವಜನಿಕರಿಗೆ ಮಾದರಿಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಟ್ಟಿಯ ನಿಖರತೆ ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಮತದಾನದ ಅರ್ಹತೆ ಹೊಂದಿರುವ ಪ್ರತಿಯೊಬ್ಬ ನಾಗರಿಕರೂ ಎಸ್ಐಆರ್–2026 ವಿಶೇಷ ಪರಿಷ್ಕರಣೆ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಅರ್ಹ ಮತದಾರರೊಬ್ಬರೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಆದ್ದರಿಂದ ಮನೆಗೆ ಭೇಟಿ ನೀಡುವ ಬಿಎಲ್ಒಗಳಿಗೆ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ಒದಗಿಸುವ ಮೂಲಕ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.
ರಾಜ್ಯಾದ್ಯಂತ ನಡೆಯುತ್ತಿರುವ ಎಸ್ಐಆರ್–2026 ಅಭಿಯಾನದ ಮೂಲಕ ಮತದಾರರ ಪಟ್ಟಿಯನ್ನು ದೋಷರಹಿತ, ಪಾರದರ್ಶಕ ಹಾಗೂ ವಿಶ್ವಾಸಾರ್ಹವಾಗಿಸಲು ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಸಹಕಾರದಿಂದಲೇ ಈ ಕಾರ್ಯ ಯಶಸ್ವಿಯಾಗಲಿದ್ದು, ಅರ್ಹ ಪ್ರತಿಯೊಬ್ಬ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ಚುನಾವಣಾ ಆಯೋಗ ಮನವಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.