
ಗದಗ, 04 ಜೂನ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕುಡಿಯುವ ನೀರಿನ ಪೂರೈಕೆ, ಮಳೆ ಹಾನಿ ಪರಿಹಾರ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಳೆಯಿಂದ ಉಂಟಾಗುವ ಹಾನಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ, ನಿರ್ಲಕ್ಷ್ಯ ಅಥವಾ ನಿಷ್ಕಾಳಜಿಯನ್ನು ಜಿಲ್ಲಾಡಳಿತ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.
ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂಗಾರು ಮಳೆಯ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಸಿದ್ಧತೆ, ಕುಡಿಯುವ ನೀರಿನ ಲಭ್ಯತೆ, ಬೆಳೆ ಹಾಗೂ ಮನೆ ಹಾನಿ, ಪರಿಹಾರ ವಿತರಣೆಯ ಪ್ರಗತಿ ಸೇರಿದಂತೆ ಹಲವು ವಿಷಯಗಳ ಕುರಿತು ಸುದೀರ್ಘ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಸಭೆಗೆ ಸಂಪೂರ್ಣ ಹಾಗೂ ನಿಖರ ಮಾಹಿತಿಯೊಂದಿಗೆ ಹಾಜರಾಗಬೇಕು. ಅಪೂರ್ಣ ಅಥವಾ ತಪ್ಪು ಮಾಹಿತಿ ನೀಡುವುದು ಗಂಭೀರ ವಿಷಯವಾಗಿದ್ದು, ಇಂತಹ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮಳೆಯಿಂದ ಹಾನಿಗೀಡಾದ ಮನೆಗಳು, ಬೆಳೆಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಕುರಿತು ತಾಲ್ಲೂಕುವಾರು ಮಾಹಿತಿ ಪಡೆದು, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು ಎಂದು ಸೂಚಿಸಿದರು.
ಮಳೆಯ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಜನ ಹಾಗೂ ಜಾನುವಾರುಗಳ ಜೀವಹಾನಿ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಅನಾಹುತ ಸಂಭವಿಸಿದ ನಂತರ ಕ್ರಮ ಕೈಗೊಳ್ಳುವ ಬದಲು ಮುನ್ನೆಚ್ಚರಿಕಾ ಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಅಧಿಕಾರಿಗಳು ನಿರಂತರ ನಿಗಾವಹಿಸಬೇಕು. ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರು ಪೂರೈಸುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದ್ದು, ಈ ವಿಷಯದಲ್ಲಿ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪ್ರವಾಹ ಉಂಟಾಗುವ ಸಾಧ್ಯತೆ ಇರುವ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಕುಟುಂಬಗಳನ್ನು ಮುಂಚಿತವಾಗಿ ಗುರುತಿಸಿ, ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕುರಿತು ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದ 23 ಕೆರೆಗಳ ನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ಕೆರೆಗಳ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಪ್ರವಾಹ ಹಾಗೂ ತುರ್ತು ಪರಿಸ್ಥಿತಿಗಳಲ್ಲಿ ರಕ್ಷಣಾ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಡೆಸಲು ಅಗ್ನಿಶಾಮಕ ಇಲಾಖೆಗೆ ಅಗತ್ಯ ಬೋಟ್ಗಳ ಖರೀದಿಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಮೇ 18ರಂದು ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಗದಗ ಮತ್ತು ಲಕ್ಷ್ಮೇಶ್ವರ ತಾಲ್ಲೂಕುಗಳಲ್ಲಿ ತಲಾ ಒಬ್ಬರಂತೆ ಇಬ್ಬರು ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ವಿತರಿಸಲಾಗಿದೆ. ಮಳೆಯಿಂದ ಮೃತಪಟ್ಟ 31 ಸಣ್ಣ ಸಾಕು ಪ್ರಾಣಿಗಳ ಮಾಲೀಕರಿಗೆ ಒಟ್ಟು ₹1.52 ಲಕ್ಷ ಪರಿಹಾರ ನೀಡಲಾಗಿದೆ.
ಪ್ರಸಕ್ತ ಸಾಲಿನ ಪೂರ್ವ ಮುಂಗಾರು ಮಳೆಯಿಂದ ಜಿಲ್ಲೆಯಲ್ಲಿ ಇದುವರೆಗೆ 14 ಮನೆಗಳು ಭಾಗಶಃ ಹಾನಿಗೀಡಾಗಿದ್ದು, ಸಂಬಂಧಿಸಿದ ಕುಟುಂಬಗಳಿಗೆ ₹91 ಸಾವಿರ ಪರಿಹಾರ ವಿತರಿಸಲಾಗಿದೆ. ಅಲ್ಲದೆ 96 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಆ ಕುಟುಂಬಗಳಿಗೆ ಒಟ್ಟು ₹4.80 ಲಕ್ಷ ಪರಿಹಾರ ನೀಡಲಾಗಿದೆ.
ಮಳೆಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ 907 ವಿದ್ಯುತ್ ಕಂಬಗಳು ಹಾಗೂ 10 ಶಾಲಾ ಕೊಠಡಿಗಳು ಹಾನಿಗೀಡಾಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್ಡಿಆರ್ಎಫ್) ಮಾನದಂಡಗಳ ಪ್ರಕಾರ ಇದರ ಹಾನಿಯ ಅಂದಾಜು ಮೊತ್ತ ₹69.35 ಲಕ್ಷ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯ 92 ರೈತರಿಗೆ ಸೇರಿದ 34.58 ಎಕರೆ ತೋಟಗಾರಿಕೆ ಪ್ರದೇಶ ಮಳೆಯಿಂದ ಹಾನಿಗೀಡಾಗಿದ್ದು, ಅದರ ಹಾನಿಯ ಮೌಲ್ಯವನ್ನು ₹6.70 ಲಕ್ಷ ಎಂದು ಅಂದಾಜಿಸಲಾಗಿದೆ. ರೈತರಿಗೆ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕುಡಿಯುವ ನೀರಿನ ಸ್ಥಿತಿಗತಿಯ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ನವಿಲುತೀರ್ಥ ಜಲಾಶಯದಲ್ಲಿ 5.905 ಟಿಎಂಸಿ, ಭದ್ರಾ ಜಲಾಶಯದಲ್ಲಿ 16.497 ಟಿಎಂಸಿ ಹಾಗೂ ಹಮ್ಮಿಗಿ ಬ್ಯಾರೇಜ್ನಲ್ಲಿ 1.978 ಟಿಎಂಸಿ ನೀರು ಸಂಗ್ರಹವಿದ್ದು, ಮುಂದಿನ 90 ದಿನಗಳವರೆಗೆ ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಸಲು ಸಾಧ್ಯವಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವ 63 ಗ್ರಾಮಗಳನ್ನು ಜಿಲ್ಲಾಡಳಿತ ಗುರುತಿಸಿದ್ದು, ಅಲ್ಲಿ ವಿಶೇಷ ನಿಗಾವಹಿಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಗದಗ-ಬೆಟಗೇರಿ ನಗರಸಭೆಯ 35 ವಾರ್ಡುಗಳು ಸೇರಿದಂತೆ ಜಿಲ್ಲೆಯ ಒಟ್ಟು 69 ವಾರ್ಡುಗಳನ್ನು ಸಮಸ್ಯಾತ್ಮಕ ಪ್ರದೇಶಗಳೆಂದು ಗುರುತಿಸಲಾಗಿದೆ.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 204 ವಾರ್ಡುಗಳಲ್ಲಿ ಒಟ್ಟು 1,196 ಬೋರ್ವೆಲ್ಗಳಿದ್ದು, ಅವುಗಳಲ್ಲಿ 923 ಬೋರ್ವೆಲ್ಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯ 51 ಆರ್ಒ ಘಟಕಗಳ ಪೈಕಿ 35 ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಯೂರಿಯಾ, ಡಿಎಪಿ ಸೇರಿದಂತೆ ಒಟ್ಟು 67,536 ಮೆಟ್ರಿಕ್ ಟನ್ ರಸಗೊಬ್ಬರಗಳ ಬೇಡಿಕೆಯಿದ್ದು, ಇದುವರೆಗೆ 18,963 ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟವಾಗಿದೆ. ಪ್ರಸ್ತುತ 14,688 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದ್ದು, ರೈತರಿಗೆ ಅಗತ್ಯ ಪ್ರಮಾಣದಲ್ಲಿ ಗೊಬ್ಬರ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ವಿವರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಮುಂಗಾರು ಹಂಗಾಮು ಆರಂಭವಾಗಿರುವುದರಿಂದ ರೈತರಿಗೆ ಅಗತ್ಯವಿರುವ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಯೂರಿಯಾ ಸೇರಿದಂತೆ ಯಾವುದೇ ರಸಗೊಬ್ಬರ ವಿತರಣೆ ವೇಳೆ ರೈತರಿಗೆ ಅನಗತ್ಯವಾಗಿ ಇತರೆ ಗೊಬ್ಬರಗಳನ್ನು ಖರೀದಿಸುವಂತೆ ಒತ್ತಾಯ ಮಾಡಬಾರದು. ಇಂತಹ ದೂರುಗಳು ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಅಂತರ್ಜಲ ಇಲಾಖೆಯ ಹಿರಿಯ ಭೂವಿಜ್ಞಾನಿಗಳು ಗೈರಾಗಿದ್ದಲ್ಲದೇ ಅಗತ್ಯ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸದಿರುವುದನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಕೆ.ಆರ್. ದುರಗೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್ಪಿ ಮುರ್ತುಜಾ ಖಾದ್ರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಡಿಡಿಪಿಐ ಆರ್.ಎಸ್. ಬುರಡಿ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಎಚ್.ಬಿ. ಹುಲಗಣ್ಣನವರ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ, ಕಾರ್ಮಿಕ ಇಲಾಖೆ ಜಿಲ್ಲಾ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಸೇರಿದಂತೆ ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರರು ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP