ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಗಳಲ್ಲಿ ಭಾಗವಹಿಸಲು ಕಲಾವಿದರು, ಕಲಾ ತಂಡಗಳಿಂದ ಅರ್ಜಿ ಆಹ್ವಾನ
ನಾನಾ
ಫೋಟೋ


ಗದಗ, 04 ಜೂನ್ (ಹಿ.ಸ.) :

ಆ್ಯಂಕರ್ : ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ರಾಜ್ಯದ ಸಾಂಸ್ಕೃತಿಕ ಕಲಾ ತಂಡಗಳಿಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲು ಸುವರ್ಣಾವಕಾಶ ಒದಗಿಸಲಾಗಿದೆ. ಸಂಸ್ಕೃತಿ, ಕಲೆ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ನಾನಾ ದೇಶಗಳಲ್ಲಿ ನಡೆಯುವ ಸಾಂಸ್ಕೃತಿಕ ಉತ್ಸವಗಳು ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯದ ಕಲಾವಿದರು ಹಾಗೂ ಕಲಾ ತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಐಸಿಸಿಆರ್ ಸಂಸ್ಥೆಯ ವತಿಯಿಂದ ಕರ್ನಾಟಕದ ಸಾಂಸ್ಕೃತಿಕ ಕಲಾ ತಂಡಗಳನ್ನು ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಿಗೆ ಕಳುಹಿಸುವ ಯೋಜನೆ ಜಾರಿಯಲ್ಲಿದ್ದು, ಇದರ ಮೂಲಕ ರಾಜ್ಯದ ಜನಪದ, ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಕಲಾಪ್ರಕಾರಗಳಿಗೆ ಜಾಗತಿಕ ಮನ್ನಣೆ ದೊರಕಿಸುವ ಉದ್ದೇಶ ಹೊಂದಲಾಗಿದೆ. ಜೊತೆಗೆ ಕಲಾವಿದರ ಪ್ರತಿಭೆಯನ್ನು ವಿಶ್ವದ ನಾನಾ ರಾಷ್ಟ್ರಗಳಲ್ಲಿ ಪ್ರಚುರಪಡಿಸಲು ಈ ಯೋಜನೆ ಸಹಕಾರಿಯಾಗಲಿದೆ.

ಜಿಲ್ಲೆಯಲ್ಲಿರುವ ಉತ್ತಮ ವೇಷಭೂಷಣ, ಕಲಾ ಕೌಶಲ್ಯ ಹಾಗೂ ಪ್ರದರ್ಶನ ಸಾಮರ್ಥ್ಯ ಹೊಂದಿರುವ ಕಲಾವಿದರು ಮತ್ತು ಕಲಾತಂಡಗಳು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಲ್ಲಿಸಬೇಕಾಗಿದೆ.

ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್ಸೈಟ್ ನಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಠಡಿ ಸಂಖ್ಯೆ 103, ಜಿಲ್ಲಾಡಳಿತ ಭವನ, ಗದಗ ಇವರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ವಿ. ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande