
ಬೆಂಗಳೂರು, 04 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ರಾಷ್ಟ್ರೀಯ ನಾಯಕತ್ವಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದ ಸಂದೇಶದಲ್ಲಿ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಅವಕಾಶ ನೀಡಿರುವುದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ, ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
“ನನ್ನ ಮೇಲಿಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ನಾನು ಚಿರಋಣಿ. ಈ ಜವಾಬ್ದಾರಿ ಕೇವಲ ಒಂದು ಹುದ್ದೆಯಲ್ಲ. ಇದು ಕಾಂಗ್ರೆಸ್ ಪಕ್ಷದ ಮೂಲ ಮೌಲ್ಯಗಳಾದ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸುವ ಅವಕಾಶವಾಗಿದೆ” ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತಪಡಿಸಿರುವ ಹರಿಪ್ರಸಾದ್, ಬೂತ್ ಮಟ್ಟದಿಂದಲೇ ಕಾಂಗ್ರೆಸ್ ಅನ್ನು ಸದೃಢಗೊಳಿಸುವ ಕಾರ್ಯಕ್ಕೆ ಒತ್ತು ನೀಡಲಾಗುವುದು ಎಂದಿದ್ದಾರೆ.
ಸಮಾಜದ ಪ್ರತಿಯೊಂದು ವರ್ಗದ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪಕ್ಷ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದ್ದಾರೆ.
ಕಾರ್ಯಕರ್ತರು ಮತ್ತು ಮುಖಂಡರ ಸಹಕಾರದೊಂದಿಗೆ ಕಾಂಗ್ರೆಸ್ ಸಂಘಟನೆಯನ್ನು ರಾಜ್ಯದಾದ್ಯಂತ ಮತ್ತಷ್ಟು ವಿಸ್ತರಿಸಿ ಬಲಿಷ್ಠಗೊಳಿಸಲು ಶ್ರಮಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಪಕ್ಷವನ್ನು ಜನರ ನಡುವೆ ಇನ್ನಷ್ಟು ಬಲವಾಗಿ ಬೆಳೆಸೋಣ” ಎಂದು ಅವರು ಕರೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.