ವಿಶ್ವ ಬಾಲ ಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಅರ್ಥಪೂರ್ಣವಾಗಿ : ಡಿಸಿ
ಗದಗ, 04 ಜೂನ್ (ಹಿ.ಸ.) : ಆ್ಯಂಕರ್ : ಬಾಲಕಾರ್ಮಿಕ ಪದ್ಧತಿ ಸಮಾಜದ ಅಭಿವೃದ್ಧಿಗೆ ಮಾರಕವಾಗಿದ್ದು, ಮಕ್ಕಳ ಭವಿಷ್ಯವನ್ನು ಕತ್ತಲೆಯತ್ತ ತಳ್ಳುವ ಈ ಅನಿಷ್ಟ ಪದ್ಧತಿಯ ವಿರುದ್ಧ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜೂನ್ 12 ರಂದು ಆಚರಿಸಲಾಗುವ ವಿಶ್ವ ಬಾಲಕಾರ್ಮಿಕ
ಫೋಟೋ


ಗದಗ, 04 ಜೂನ್ (ಹಿ.ಸ.) :

ಆ್ಯಂಕರ್ : ಬಾಲಕಾರ್ಮಿಕ ಪದ್ಧತಿ ಸಮಾಜದ ಅಭಿವೃದ್ಧಿಗೆ ಮಾರಕವಾಗಿದ್ದು, ಮಕ್ಕಳ ಭವಿಷ್ಯವನ್ನು ಕತ್ತಲೆಯತ್ತ ತಳ್ಳುವ ಈ ಅನಿಷ್ಟ ಪದ್ಧತಿಯ ವಿರುದ್ಧ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜೂನ್ 12 ರಂದು ಆಚರಿಸಲಾಗುವ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ನಡೆದ ಪೂರ್ವಭಾವಿ ಸಭೆ ಹಾಗೂ ಜಿಲ್ಲಾ ಮಟ್ಟದ ಟಾಸ್ಕ್ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆ ಕೇವಲ ಒಂದು ದಿನದ ಕಾರ್ಯಕ್ರಮವಾಗಿರದೆ, ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ವ್ಯಾಪಕ ಅರಿವು ಮೂಡಿಸುವ ವೇದಿಕೆಯಾಗಬೇಕು. ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಹಕ್ಕುಗಳ ರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜೂನ್ 12 ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಿಷ್ಟಾಚಾರದನ್ವಯ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಸಕಾಲದಲ್ಲಿ ಮುದ್ರಿಸಿ ವಿತರಿಸಬೇಕು. ಗ್ರಾಮ ಪಂಚಾಯಿತಿಗಳು, ಪುರಸಭೆಗಳು ಹಾಗೂ ನಗರಸಭೆಗಳ ಮೂಲಕ ಡಂಗುರ ಸಾರುವ ಮೂಲಕ ಸಾರ್ವಜನಿಕರಿಗೆ ಜಾತಾ ಕಾರ್ಯಕ್ರಮ ಹಾಗೂ ದಿನಾಚರಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸುವ ಸಂಕಲ್ಪವನ್ನು ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಜಾತಾ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಬೆಳೆಸುವ ಉದ್ದೇಶದಿಂದ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಬೇಕು. ಈ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ಒಂಬತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮವೂ ದಿನಾಚರಣೆಯ ಅಂಗವಾಗಿ ನಡೆಯಲಿದೆ ಎಂದು ತಿಳಿಸಿದರು.

ಬಾಲಕಾರ್ಮಿಕ ಪದ್ಧತಿ ತಡೆಗಟ್ಟುವ ನಿಟ್ಟಿನಲ್ಲಿ ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗದೆ, ಜೂನ್ 13 ರಿಂದ ಜೂನ್ 30ರವರೆಗೆ ಜಿಲ್ಲೆಯಾದ್ಯಂತ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಈ ಅವಧಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಿತ ಸಂಸ್ಥೆಗಳು ಜಂಟಿಯಾಗಿ ಕಾರ್ಯನಿರ್ವಹಿಸಿ ಬಾಲಕಾರ್ಮಿಕರನ್ನು ಪತ್ತೆಹಚ್ಚಿ, ಅವರ ರಕ್ಷಣೆ ಹಾಗೂ ಪುನರ್ವಸತಿಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಇದೇ ವೇಳೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸಲು ಜಿಲ್ಲೆಯಾದ್ಯಂತ ಧ್ವನಿ ಮುದ್ರಿಕೆಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವ್ಯಾಪಕ ಪ್ರಚಾರ ನಡೆಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಸಮಾಜದ ಪ್ರತಿಯೊಬ್ಬ ನಾಗರಿಕನೂ ಬಾಲಕಾರ್ಮಿಕ ಪದ್ಧತಿ ವಿರುದ್ಧ ಹೋರಾಡಬೇಕಿದೆ. ಮಕ್ಕಳನ್ನು ಶಾಲೆಯಿಂದ ದೂರವಿಟ್ಟು ದುಡಿಮೆಗೆ ತಳ್ಳುವುದು ಕಾನೂನುಬಾಹಿರವಾಗಿದ್ದು, ಮಕ್ಕಳ ಶಿಕ್ಷಣ ಮತ್ತು ಅಭಿವೃದ್ಧಿಗೆ ಅಡ್ಡಿಯಾಗುತ್ತದೆ. ಆದ್ದರಿಂದ ಸಾರ್ವಜನಿಕರು ಬಾಲಕಾರ್ಮಿಕರನ್ನು ಕಂಡುಬಂದಲ್ಲಿ ಸಂಬಂಧಿತ ಇಲಾಖೆಗೆ ಮಾಹಿತಿ ನೀಡಿ ಮಕ್ಕಳ ರಕ್ಷಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕರೆ ನೀಡಿದರು.

ಸಭೆಯಲ್ಲಿ ದಿನಾಚರಣೆ ಕಾರ್ಯಕ್ರಮದ ವೇದಿಕೆ ವ್ಯವಸ್ಥೆ, ವೇದಿಕೆ ಅಲಂಕಾರ, ಜಾಗೃತಿ ಜಾತಾ, ಸ್ಪರ್ಧೆಗಳ ಆಯೋಜನೆ ಹಾಗೂ ವಿವಿಧ ಇಲಾಖೆಗಳ ಜವಾಬ್ದಾರಿಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಕೆ.ಆರ್. ದುರಗೇಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್ಪಿ ಮುರ್ತುಜಾ ಖಾದ್ರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಎಸ್. ಸೋಮನಕಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯಶ್ರೀ ತೊಟಗೇರ, ನಗರಾಭಿವೃದ್ಧಿ ಯೋಜನೆ ನಿರ್ದೇಶಕ ಬಸವರಾಜ ಕೊಟೂರು, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸಂದೇಶ ಪಾಟೀಲ್, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ, ಸ್ಪಂದನ ಸಂಸ್ಥೆಯ ಎನ್ಜಿಒ ಅಶ್ವಿನಿ ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande