
ವಿಜಯಪುರ, 04 ಜೂನ್ (ಹಿ.ಸ.) :
ಆಂಕರ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿರುವುದಕ್ಕೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಎಐಸಿಸಿ ಪ್ರಕಟಿಸಿರುವ ಆದೇಶದಂತೆ ಬಿ.ಕೆ. ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಸಕ ಶಿವಾನಂದ ಪಾಟೀಲ್ ಅವರು ಬಿ.ಕೆ. ಹರಿಪ್ರಸಾದ್ ಅವರಿಗೆ ಪ್ರಕಟಣೆ ಮೂಲಕ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.
ಅಭಿನಂದನಾ ಸಂದೇಶದಲ್ಲಿ ಮಾತನಾಡಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ಬಿ.ಕೆ. ಹರಿಪ್ರಸಾದ್ ಅವರು ಪಕ್ಷ ಸಂಘಟನೆ, ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಹಾಗೂ ತಳಮಟ್ಟದ ನಾಯಕತ್ವ ನಿರ್ಮಾಣದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅವರು, ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷದ ಹಿರಿಯ ನಾಯಕರಾಗಿ ಬೆಳೆದಿದ್ದಾರೆ. ಅವರ ದೀರ್ಘ ರಾಜಕೀಯ ಅನುಭವ ಹಾಗೂ ಸಂಘಟನಾ ಸಾಮರ್ಥ್ಯ ಮುಂಬರುವ ದಿನಗಳಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಮತ್ತು ದಿಕ್ಕು ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಾದ್ಯಂತ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುವಲ್ಲಿ ಹರಿಪ್ರಸಾದ್ ಅವರ ನೇತೃತ್ವ ಪ್ರಮುಖ ಪಾತ್ರ ವಹಿಸಲಿದೆ. ಪಕ್ಷದ ತತ್ವ, ಸಿದ್ಧಾಂತ ಮತ್ತು ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಅವರು ಯಶಸ್ವಿಯಾಗಲಿದ್ದಾರೆ ಎಂದು ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವು ಮತ್ತಷ್ಟು ಸಂಘಟಿತವಾಗಿ ಕಾರ್ಯನಿರ್ವಹಿಸಿ ರಾಜ್ಯದ ಅಭಿವೃದ್ಧಿ ಹಾಗೂ ಜನಪರ ಆಡಳಿತಕ್ಕೆ ಪೂರಕವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದ ಅವರು, ತಮ್ಮ ಹಾಗೂ ತಮ್ಮ ಕ್ಷೇತ್ರದ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲ್ಪಟ್ಟಿರುವ ಈ ನೇಮಕಾತಿಯಿಂದ ಕಾಂಗ್ರೆಸ್ ಸಂಘಟನೆಗೆ ಹೊಸ ಚೈತನ್ಯ ದೊರೆಯಲಿದ್ದು, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್ / jyothi deshpande