
ಗದಗ, 04 ಜೂನ್ (ಹಿ.ಸ.) :
ಆ್ಯಂಕರ್ : 2002ರ ಮೇ 16ರಂದು ನೋಂದಣಿ ಮಾಡಲ್ಪಟ್ಟ ಗದುಗಿನ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ ಮೇ 2027ಕ್ಕೆ 25 ವರ್ಷಗಳನ್ನು ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ 2026–2027ನೇ ಶೈಕ್ಷಣಿಕ ವರ್ಷವನ್ನು ರಜತೋತ್ಸವ ವರ್ಷವಾಗಿ ಆಚರಿಸಲು ಭವ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ರಜತ ಮಹೋತ್ಸವ ಸಮಿತಿ ಉಸ್ತುವಾರಿಗಳಾದ ಡಾ. ಜಿ.ಬಿ. ಪಾಟೀಲ ತಿಳಿಸಿದ್ದಾರೆ.
ಗದಗ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥೆಯು ಕಳೆದ ಎರಡು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮಹತ್ವಾಕಾಂಕ್ಷೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಪ್ರಸ್ತುತ ಸಂಸ್ಥೆಯ ವತಿಯಿಂದ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳು, ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳು, ಮಹಿಳಾ ವಸತಿ ನಿಲಯ ಹಾಗೂ ಐಟಿಐ ಕಾಲೇಜುಗಳು ಯಶಸ್ವಿಯಾಗಿ ನಡೆಯುತ್ತಿವೆ ಎಂದು ವಿವರಿಸಿದರು. ಮುಂದಿನ ದಿನಗಳಲ್ಲಿ ವೈದ್ಯಕೀಯ ಶಿಕ್ಷಣ, ವಿಜ್ಞಾನ–ತಂತ್ರಜ್ಞಾನ, ತಾಂತ್ರಿಕ ವಿದ್ಯಾಲಯಗಳು ಹಾಗೂ ಕೇಂದ್ರ ಪಠ್ಯಕ್ರಮ ಆಧಾರಿತ ಶಾಲಾ–ಕಾಲೇಜುಗಳನ್ನು ಆರಂಭಿಸುವ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಸಂಸ್ಥೆಯ 25 ವರ್ಷದ ಸಾಧನೆ ಹಾಗೂ ಮುಂದಿನ ಅಭಿವೃದ್ಧಿ ಯೋಜನೆಗಳನ್ನು ಸಮಾಜ ಮತ್ತು ಸಾರ್ವಜನಿಕರ ಗಮನಕ್ಕೆ ತರುವ ಉದ್ದೇಶದಿಂದ ರಜತ ಮಹೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ ಎಂದು ಡಾ. ಪಾಟೀಲ ಹೇಳಿದರು.
ಈ ಸಂದರ್ಭದಲ್ಲಿ ನಿವೃತ್ತ ನ್ಯಾಯಾಧೀಶರಾದ ಎಸ್. ಜಿ. ಪಲ್ಲೇದ ಮಾತನಾಡಿ, ರಜತ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ಇದೇ ಜೂನ್ 7ರಂದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಶ್ರೀಗಳ ಅಮೃತಹಸ್ತದಿಂದ ನಡೆಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರಜತೋತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಗುವುದು.
ಅದೇ ದಿನ ಸಂಸ್ಥೆಯ ಕುರಿತ ಸಾಕ್ಷ್ಯಚಿತ್ರದ ವಿಡಿಯೋ ಕ್ಲಿಪ್ ಬಿಡುಗಡೆಗೊಳ್ಳಲಿದ್ದು, ಸಂಸ್ಥೆಯ ನೂತನ ಕಟ್ಟಡ ಆವರಣದಲ್ಲಿ 25 ಸಸಿಗಳನ್ನು ನೆಡುವ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದರು. ನಂತರ ಬಯಲು ಆಂಜನೇಯ ದೇವಸ್ಥಾನದ ಆವರಣದ ವೇದಿಕೆಯಲ್ಲಿ ಶ್ರೀಗಳು ಭಕ್ತಸಾಗರವನ್ನು ಉದ್ದೇಶಿಸಿ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸದ್ಭಾವನಾ ಪ್ರಶಸ್ತಿ ಪುರಸ್ಕೃತರಾದ ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಡಿ. ಆರ್. ಪಾಟೀಲ, ಕರ್ನಾಟಕ ರಾಜ್ಯ ವಿದ್ಯುತ್ ನಿಗಮದ ನಿರ್ದೇಶಕರು ಹಾಗೂ ಅಭಿಯಂತರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿ. ಬಸವಣ್ಣ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎರಡನೇ ಅವಧಿಗೆ ಆಯ್ಕೆಯಾದ ಚಂದ್ರಶೇಖರ ನುಗ್ಗಲಿ ಅವರನ್ನು ಶ್ರೀಗಳು ಸನ್ಮಾನಿಸಿ ಆಶೀರ್ವದಿಸಲಿದ್ದಾರೆ ಎಂದು ವಿವರಿಸಿದರು.
ರಜತ ಮಹೋತ್ಸವದ ಅಂಗವಾಗಿ ಮುಂದಿನ ತಿಂಗಳಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಅದೇ ರೀತಿ ಮುಂದಿನ ತಿಂಗಳುಗಳಲ್ಲಿ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಯುವಕ–ಯುವತಿಯರಿಗಾಗಿ ದೇಶಿ ಕ್ರೀಡೆಗಳ ಉತ್ಸವ ಸೇರಿದಂತೆ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಮಹಿಳಾ ಸಬಲೀಕರಣ, ಸಾಂಸ್ಕೃತಿಕ ಸ್ಪರ್ಧೆಗಳು, ಕಾನೂನು ಅರಿವು–ನೆರವು ಹಾಗೂ ಅಪರಾಧ ತಡೆ ಜಾಗೃತಿ ಕಾರ್ಯಕ್ರಮಗಳನ್ನು ಸಹ ಆಯೋಜಿಸಲು ಯೋಜಿಸಲಾಗಿದೆ ಎಂದು ಹೇಳಿದರು.
ಸಾವಯವ ಕೃಷಿ ತರಬೇತಿ, ಕೌಶಲ್ಯಾಧಾರಿತ ತರಬೇತಿ, ಉದ್ಯೋಗ ಮೇಳ, ವೃತ್ತಿ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಶಿಬಿರಗಳನ್ನು ಸಹ ಹಮ್ಮಿಕೊಳ್ಳಲಾಗುವುದು ಎಂದು ರಜತ ಮಹೋತ್ಸವ ಸಮಿತಿ ತಿಳಿಸಿದೆ.
ಇದೇ ವೇಳೆ ಒಂದು ದಿನದ ಜಾನಪದ ಜಾತ್ರೆ ಹಾಗೂ ಪ್ರತಿ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಅವರು ಹೇಳಿದರು.
ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಎಲ್ಲಾ ಕಾರ್ಯಕ್ರಮಗಳ ಸಂಗ್ರಹವನ್ನು ಒಳಗೊಂಡ ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಲಾಯಿತು.
ಈ ಸುದ್ದಿಗೋಷ್ಠಿಯಲ್ಲಿ ಬಿ. ಬಿ. ಭಾವಿಕಟ್ಟಿ, ಫಕೀರಪ್ಪ ಹೆಬಸೂರ, ಆರ್. ಡಿ. ಕಡ್ಲಿಕೊಪ್ಪ, ನೀಲಕಂಠ ಮರಡಿ, ವೈ. ಬಿ. ಭಾನಾಪೂರ, ಆರ್. ಎಂ. ನಿಂಬನಾಯ್ಕ, ಎಸ್. ಡಿ. ಸಿಂಗಟಾಲಕೇರಿ, ಎಸ್. ಎಸ್. ಕರಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP