
ವಿಜಯಪುರ, 05 ಜೂನ್ (ಹಿ.ಸ.) :
ಆಂಕರ್ : ಪೊಲೀಸ್ ಇಲಾಖೆಯಲ್ಲಿ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ಹಾಗೂ ಇತರೆ ದಂಡ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಿ ಪ್ರಕರಣಗಳನ್ನು ಮುಕ್ತಾಯಗೊಳಿಸಲು ಸರ್ಕಾರ ಅವಕಾಶ ನೀಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ವಿಜಯಪುರ ಪೊಲೀಸ್ ಇಲಾಖೆ, ಬಾಕಿ ಇರುವ ದಂಡ ಪ್ರಕರಣಗಳ ಇತ್ಯರ್ಥಕ್ಕಾಗಿ ಜೂನ್ 21, 2026 ರಿಂದ ಜುಲೈ 10, 2026 ರವರೆಗೆ ಒಟ್ಟು 20 ದಿನಗಳ ಕಾಲ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.
ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವಿರುದ್ಧ ದಾಖಲಾಗಿರುವ ಬಾಕಿ ದಂಡ ಪ್ರಕರಣಗಳನ್ನು ಪರಿಶೀಲಿಸಿ, ನಿಗದಿತ ಶೇ.50 ದಂಡ ಪಾವತಿಸುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ಸುಲಭವಾಗಿ ಮುಕ್ತಾಯಗೊಳಿಸುವ ಅವಕಾಶ ದೊರೆಯಲಿದೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಸಂಚಾರ ನಿಯಮ ಉಲ್ಲಂಘನೆ ಸೇರಿದಂತೆ ವಿವಿಧ ಸಣ್ಣಪುಟ್ಟ ದಂಡ ಪ್ರಕರಣಗಳು ಹಲವರ ವಿರುದ್ಧ ದಾಖಲಾಗಿದ್ದು, ಅನೇಕರು ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಾರೆ. ಇಂತಹ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ಈ ವಿಶೇಷ ಯೋಜನೆ ಜಾರಿಗೊಳಿಸಲಾಗಿದೆ.
ಸಾರ್ವಜನಿಕರು ತಮ್ಮ ವಾಹನ ಸಂಖ್ಯೆ ಅಥವಾ ಸಂಬಂಧಿತ ವಿವರಗಳ ಮೂಲಕ ಬಾಕಿ ಪ್ರಕರಣಗಳ ಮಾಹಿತಿ ಪಡೆದು, ನಿಗದಿತ ಅವಧಿಯೊಳಗೆ ದಂಡ ಪಾವತಿಸಿ ಕಾನೂನುಬದ್ಧವಾಗಿ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಬೇಕು. ಅವಧಿ ಮುಗಿದ ಬಳಿಕ ಸಾಮಾನ್ಯ ನಿಯಮಗಳ ಪ್ರಕಾರ ಪೂರ್ಣ ದಂಡ ಪಾವತಿಸಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವಿಶೇಷ ಅವಕಾಶದಿಂದ ಸಾರ್ವಜನಿಕರಿಗೆ ಆರ್ಥಿಕವಾಗಿ ಅನುಕೂಲವಾಗಲಿದ್ದು, ನ್ಯಾಯಾಲಯ ಹಾಗೂ ಪೊಲೀಸ್ ಇಲಾಖೆಯಲ್ಲಿನ ಬಾಕಿ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುವ ನಿರೀಕ್ಷೆಯಿದೆ.
ಆದ್ದರಿಂದ ಸಾರ್ವಜನಿಕರು ಈ ಸೌಲಭ್ಯದ ಸಂಪೂರ್ಣ ಪ್ರಯೋಜನ ಪಡೆದು, ಬಾಕಿ ಇರುವ ಪೊಲೀಸ್ ದಂಡ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande