
ವಿಜಯಪುರ, 05 ಜೂನ್ (ಹಿ.ಸ.) :
ಆಂಕರ್ : ಕಾನೂನು ವ್ಯಾಜ್ಯಗಳಲ್ಲಿ ಸಿಲುಕಿರುವ ರೈತರು ಹಾಗೂ ಭೂಸ್ವಾಧೀನಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂತ್ರಸ್ತರಿಗೆ ಲೋಕ ಅದಾಲತ್ನ ಮಹತ್ವವನ್ನು ತಿಳಿಸಿ, ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಉತ್ತೇಜಿಸುವ ಉದ್ದೇಶದಿಂದ ವಿಜಯಪುರ ಜಿಲ್ಲೆಯ
ಮುದ್ದೇಬಿಹಾಳ ತಾಲೂಕಿನ ಶಿವಪುರ ಗ್ರಾಮದಲ್ಲಿ ಗ್ರಾಮಸಭೆ ಆಯೋಜಿಸಲಾಯಿತು.
ಆಲಮಟ್ಟಿ (ಕೃಷ್ಣಾ ಮೇಲ್ದಂಡೆ ಯೋಜನೆ) ಭೂಸ್ವಾಧೀನಾಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಗ್ರಾಮಸಭೆಯಲ್ಲಿ ಲೋಕ ಅದಾಲತ್ನ ಉದ್ದೇಶ, ಕಾರ್ಯವೈಖರಿ ಹಾಗೂ ಅದರ ಪ್ರಯೋಜನಗಳ ಕುರಿತು ಗ್ರಾಮಸ್ಥರು ಮತ್ತು ರೈತರಿಗೆ ಸವಿಸ್ತಾರ ಮಾಹಿತಿ ನೀಡಲಾಯಿತು.
ನ್ಯಾಯಾಲಯಗಳಲ್ಲಿ ವರ್ಷಗಳ ಕಾಲ ಬಾಕಿ ಉಳಿಯುವ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಕಡಿಮೆ ಅವಧಿಯಲ್ಲಿ, ಕಡಿಮೆ ವೆಚ್ಚದಲ್ಲಿ ಹಾಗೂ ಪರಸ್ಪರ ಒಪ್ಪಂದದ ಆಧಾರದ ಮೇಲೆ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಗ್ರಾಮಸಭೆಯಲ್ಲಿ ಮಾತನಾಡಿದ ಅಧಿಕಾರಿಗಳು, ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳಲ್ಲಿ ಅನೇಕ ರೈತರು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಇಂತಹ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಂಡರೆ ಸಮಯ ಮತ್ತು ಹಣ ಎರಡನ್ನೂ ಉಳಿಸಬಹುದು. ಅಲ್ಲದೆ ನ್ಯಾಯಾಂಗ ಪ್ರಕ್ರಿಯೆಯ ಒತ್ತಡದಿಂದಲೂ ಮುಕ್ತಿ ಪಡೆಯಬಹುದು ಎಂದು ಹೇಳಿದರು.
ರೈತರಿಗೆ ಲಭ್ಯವಿರುವ ಕಾನೂನು ಸೌಲಭ್ಯಗಳು, ಪರಿಹಾರ ಮೊತ್ತಕ್ಕೆ ಸಂಬಂಧಿಸಿದ ಹಕ್ಕುಗಳು ಹಾಗೂ ನ್ಯಾಯ ಪಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಹ ವಿವರಿಸಲಾಯಿತು. ಗ್ರಾಮಸ್ಥರು ಹಾಗೂ ರೈತರು ತಮ್ಮ ಸಮಸ್ಯೆಗಳು ಮತ್ತು ಅನುಮಾನಗಳನ್ನು ಅಧಿಕಾರಿಗಳ ಮುಂದೆ ಮಂಡಿಸಿದ್ದು, ಅವುಗಳಿಗೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡಲಾಯಿತು.
ಲೋಕ ಅದಾಲತ್ ವ್ಯವಸ್ಥೆಯು ನ್ಯಾಯವನ್ನು ಜನಸಾಮಾನ್ಯರಿಗೆ ಸುಲಭವಾಗಿ ಮತ್ತು ಶೀಘ್ರವಾಗಿ ತಲುಪಿಸುವ ಪರಿಣಾಮಕಾರಿ ವೇದಿಕೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು.
ಗ್ರಾಮಸಭೆಯಲ್ಲಿ ಗ್ರಾಮಸ್ಥರು, ರೈತರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಲೋಕ ಅದಾಲತ್ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande