
ವಿಜಯಪುರ, 05 ಜೂನ್ (ಹಿ.ಸ.) :
ಆಂಕರ್ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ವಿಜಯಪುರ ನಗರ ಯುವ ಮೋರ್ಚಾ ವತಿಯಿಂದ ನಗರದ ಕರಾಡದೊಡ್ಡಿ ಸಮೀಪದ ಹಣುಮಗಿರಿ ದೇವಸ್ಥಾನ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರ ನಿರ್ಮಾಣದ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಕೇಂದ್ರ ಸಚಿವರು ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾದ ರಮೇಶ್ ಜಿಗಜಿಣಗಿ ಸಸಿ ನೆಟ್ಟು ಮಾತನಾಡಿ, ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬ ನಾಗರಿಕನು ಕನಿಷ್ಠ ಒಂದು ಗಿಡ ನೆಟ್ಟು ಅದರ ಪೋಷಣೆಯ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಹೆಚ್ಚುತ್ತಿರುವ ಮಾಲಿನ್ಯ, ಹವಾಮಾನ ವೈಪರೀತ್ಯ ಮತ್ತು ಅರಣ್ಯ ನಾಶದ ಸಮಸ್ಯೆಗಳನ್ನು ಎದುರಿಸಲು ಹಸಿರು ವಾತಾವರಣ ನಿರ್ಮಾಣವೇ ಉತ್ತಮ ಪರಿಹಾರವಾಗಿದೆ ಎಂದು ಹೇಳಿದರು.
ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಸಮಾಜದ ಪ್ರತಿಯೊಬ್ಬ ಸದಸ್ಯನ ಕರ್ತವ್ಯವಾಗಿದೆ. ವಿಶ್ವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮಗಳು ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯ ರಾಜು ಮಗೀಮಠ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವೂರ, ಜಿಲ್ಲಾ ಕಾರ್ಯದರ್ಶಿಗಳಾದ ಕೃಷ್ಣಾ ಗುನ್ನಾಳಕರ ಹಾಗೂ ರಮೇಶ ಬಿದನೂರ, ಚಿನ್ನು ಚಿನಗುಂಡಿ, ಎಸ್ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಮೀಸಿ, ವಿಜಯ ಜೋಶಿ, ರಾಮಚಂದ್ರ ಚೌಹಾಣ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆನಂದ ಮುಚ್ಚಂಡಿ, ವಿವೇಕ ತಾವರಗೆರಿ, ಮಂಥನ ಗಾಯಕವಾಡ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದು ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.
ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಭೂಯಾರ ಮಾತನಾಡಿ, ಪರಿಸರ ಉಳಿಸುವ ನಿಟ್ಟಿನಲ್ಲಿ ಮಹಿಳೆಯರು ಮತ್ತು ಯುವಜನತೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಮನೆ ಮತ್ತು ಸಮಾಜದ ಮಟ್ಟದಲ್ಲಿ ಹಸಿರು ಅಭಿಯಾನಗಳಿಗೆ ಉತ್ತೇಜನ ನೀಡುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರವಹಿಸಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಅವುಗಳ ಪೋಷಣೆ ಮಾಡುವ ಸಂಕಲ್ಪ ಕೈಗೊಂಡರು. “ಒನ್ ಟ್ರೀ ಇನ್ ಮದರ್ಸ್ ನೇಮ್” (ತಾಯಿಯ ಹೆಸರಿನಲ್ಲಿ ಒಂದು ಮರ) ಎಂಬ ಸಂದೇಶದೊಂದಿಗೆ ಸಸಿ ನೆಡುವ ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು.
ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು, ಮುಂದಿನ ಪೀಳಿಗೆಗೆ ಹಸಿರು ಮತ್ತು ಆರೋಗ್ಯಕರ ಪರಿಸರವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande