ಹಿಜಾಬ್ ಆದೇಶ ಖಂಡಿಸಿ ವಿಜಯಪುರದಲ್ಲಿ ಯತ್ನಾಳ್ ಪ್ರತಿಭಟನೆ
ವಿಜಯಪುರ, 05 ಜೂನ್ (ಹಿ.ಸ.) : ಆಂಕರ್ : ರಾಜ್ಯದ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಬುರ್ಖಾ ಹಾಗೂ ಹಿಜಾಬ್ ಧರಿಸಿಕೊಂಡು ಬರಲು ಸರ್ಕಾರ ಅನುಮತಿ ನೀಡಿರುವುದನ್ನು ಖಂಡಿಸಿ ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ವಿನೂತನ ಪ್ರತಿಭಟನೆ ನಡೆಯಿತು. ನಗರದ ದರ್ಬಾರ್
Protest


ವಿಜಯಪುರ, 05 ಜೂನ್ (ಹಿ.ಸ.) :

ಆಂಕರ್ : ರಾಜ್ಯದ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಬುರ್ಖಾ ಹಾಗೂ ಹಿಜಾಬ್ ಧರಿಸಿಕೊಂಡು ಬರಲು ಸರ್ಕಾರ ಅನುಮತಿ ನೀಡಿರುವುದನ್ನು ಖಂಡಿಸಿ ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ವಿನೂತನ ಪ್ರತಿಭಟನೆ ನಡೆಯಿತು. ನಗರದ ದರ್ಬಾರ್ ಕಾಲೇಜು ಸಮೀಪ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹೊದಿಸುವ ಮೂಲಕ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನೆ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಹಾಗೂ ಯತ್ನಾಳ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

ಪ್ರತಿಭಟನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಬುರ್ಖಾ ಧರಿಸುವ ವಿಚಾರ ಈಗಾಗಲೇ ನ್ಯಾಯಾಲಯದ ಪರಿಗಣನೆಯಲ್ಲಿದೆ. ಇಂತಹ ಸಂದರ್ಭದಲ್ಲಿ ನ್ಯಾಯಾಲಯದ ಅಂತಿಮ ಆದೇಶ ಹೊರಬರುವ ಮುನ್ನವೇ ರಾಜ್ಯ ಸರ್ಕಾರ ಅನುಮತಿ ನೀಡಿರುವುದು ನ್ಯಾಯಾಂಗದ ಪ್ರಕ್ರಿಯೆಗೆ ಅವಮಾನ ಮಾಡಿದಂತಾಗಿದೆ ಎಂದು ಆರೋಪಿಸಿದರು.

ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು ತಮ್ಮದೇ ಆದ ಸಮವಸ್ತ್ರ ನಿಯಮಗಳನ್ನು ಹೊಂದಿದ್ದು, ಅವು ವಿದ್ಯಾರ್ಥಿಗಳಲ್ಲಿ ಸಮಾನತೆಯ ಭಾವನೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಸಮವಸ್ತ್ರದಿಂದ ವಿದ್ಯಾರ್ಥಿಗಳ ನಡುವೆ ಯಾವುದೇ ಧರ್ಮ, ಜಾತಿ ಅಥವಾ ಸಾಮಾಜಿಕ ಭೇದಭಾವ ಕಾಣಿಸಿಕೊಳ್ಳುವುದಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ನಿರ್ದಿಷ್ಟ ಸಮುದಾಯವನ್ನು ಓಲೈಸುವ ಉದ್ದೇಶದಿಂದ ಈ ರೀತಿಯ ನಿರ್ಧಾರ ಕೈಗೊಂಡಿದ್ದು, ಇದರಿಂದ ವಿದ್ಯಾರ್ಥಿಗಳ ನಡುವೆ ಬೇಧಭಾವ ಉಂಟಾಗುವ ಸಾಧ್ಯತೆ ಇದೆ ಎಂದು ಟೀಕಿಸಿದರು.

ಸರ್ಕಾರದ ನಿರ್ಧಾರವನ್ನು ಖಂಡಿಸುವ ಉದ್ದೇಶದಿಂದಲೇ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹೊದಿಸುವ ಮೂಲಕ ಎಚ್ಚರಿಕೆ ನೀಡಿದ್ದೇವೆ. ಇದೇ ವೇಳೆ ಶಾಲಾ-ಕಾಲೇಜುಗಳಲ್ಲಿ ಹಾಜರಾತಿ ವೇಳೆ ವಿದ್ಯಾರ್ಥಿಗಳು ಜೈ ಶ್ರೀರಾಮ ಅಥವಾ ಜೈ ಭೀಮ್ ಎಂದು ಹೇಳುವ ಮೂಲಕ ಸರ್ಕಾರದ ನೀತಿಗೆ ಪ್ರಜಾಸತ್ತಾತ್ಮಕವಾಗಿ ಉತ್ತರ ನೀಡಬೇಕು ಎಂದು ಕರೆ ನೀಡಿರುವುದಾಗಿ ತಿಳಿಸಿದರು.

ಹಿಂದುತ್ವದ ಪರವಾಗಿ ನಾವು ಪ್ರತಿಭಟನೆ ನಡೆಸುತ್ತಿದ್ದಂತೆಯೇ ರಾಜ್ಯ ಸರ್ಕಾರ ಪೊಲೀಸ್ ಶಕ್ತಿಯನ್ನು ಬಳಸಿ ನಮ್ಮನ್ನು ಅಪರಾಧಿಗಳಂತೆ ಬಂಧಿಸಿದೆ. ಇದು ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವಾಗಿದ್ದು, ವಿರೋಧದ ಧ್ವನಿಗಳನ್ನು ಕುಂಠಿತಗೊಳಿಸುವ ಷಡ್ಯಂತ್ರ ಎಂದು ಯತ್ನಾಳ್ ವಾಗ್ದಾಳಿ ನಡೆಸಿದರು.

ಮುಂದುವರಿದು ಮಾತನಾಡಿದ ಅವರು, ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ದುರ್ಬಲಗೊಂಡಂತೆ ಕರ್ನಾಟಕದಲ್ಲಿಯೂ ಹೀನಾಯ ಪರಿಸ್ಥಿತಿ ಎದುರಿಸಬೇಕಾಗಬಹುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಆಡಳಿತವು ಬಿ ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳ ಪ್ರಕಾರ ನಡೆಯಬೇಕು. ಯಾವುದೇ ವ್ಯಕ್ತಿ ಅಥವಾ ಕುಟುಂಬದ ಇಚ್ಛೆಯ ಪ್ರಕಾರ ಆಡಳಿತ ನಡೆಸಲು ಅವಕಾಶ ನೀಡಲಾಗುವುದಿಲ್ಲ ಎಂದು ಅವರು ಹೇಳಿದರು.

ಹಿಂದೂ ಸಂಘಟನೆಗಳು ಹಾಗೂ ಹಿಂದೂ ಹಬ್ಬಗಳಿಗೆ ತೊಂದರೆ ಉಂಟುಮಾಡುವ ಪ್ರಯತ್ನಗಳು ನಡೆದರೆ ಅದರ ವಿರುದ್ಧ ಹೋರಾಟ ಮುಂದುವರಿಸುತ್ತೇನೆ. ಅಗತ್ಯವಿದ್ದರೆ ಜೈಲಿಗೆ ಹೋಗಲೂ ಸಿದ್ಧನಿದ್ದೇನೆ. ಸರ್ಕಾರ ಹಿಜಾಬ್ ಸಂಬಂಧಿತ ಆದೇಶವನ್ನು ಹಿಂಪಡೆಯುವವರೆಗೆ ರಾಜ್ಯಾದ್ಯಂತ ಹೋರಾಟ ಮುಂದುವರಿಸುವುದಾಗಿ ಯತ್ನಾಳ್ ಘೋಷಿಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ಘಟನೆಯು ರಾಜ್ಯ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸರ್ಕಾರದ ನಿರ್ಧಾರ ಹಾಗೂ ಅದಕ್ಕೆ ವಿರೋಧವಾಗಿ ನಡೆದಿರುವ ಪ್ರತಿಭಟನೆ ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಚರ್ಚೆಗೆ ವೇದಿಕೆ ಕಲ್ಪಿಸುವ ಸಾಧ್ಯತೆ ಇದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande