
ಬೆಂಗಳೂರು, 05 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆ ಮತ್ತು ಖಾತೆ ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಅಸಮಾಧಾನದ ಕುರಿತು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ಸಿಗದ ಕಾರಣ ಪ್ರಮಾಣ ವಚನ ಸಮಾರಂಭದಿಂದ ಅರ್ಧದಲ್ಲೇ ಎದ್ದು ಹೋಗಬೇಕಾಯಿತು ಎಂದು ಅವರು ಉಲ್ಲೇಖಿಸಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಭರವಸೆ ನೀಡಿದ್ದ ಖಾತೆ ದೊರೆಯಲಿಲ್ಲ ಎಂಬ ಕಾರಣಕ್ಕೆ ಅವರು ಬಹಿರಂಗವಾಗಿ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಸಿದ್ದಾರೆ ಎಂದಿದ್ದಾರೆ.
ಇದೇ ವೇಳೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತಮ್ಮ ಹಿರಿತನ ಮತ್ತು ಸಾಮರ್ಥ್ಯಕ್ಕೆ ತಕ್ಕ ಖಾತೆ ನೀಡುವವರೆಗೆ ಈಗಾಗಲೇ ಹಂಚಿಕೆಯಾಗಿರುವ ಖಾತೆಯ ಜವಾಬ್ದಾರಿ ವಹಿಸಿಕೊಳ್ಳುವುದಿಲ್ಲ ಎಂದು ಹೇಳಿರುವುದನ್ನೂ ಅಶೋಕ್ ಪ್ರಸ್ತಾಪಿಸಿದ್ದಾರೆ.
ಇಷ್ಟೆಲ್ಲ ಬೆಳವಣಿಗೆಗಳು ನಡೆದಿದ್ದರೂ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಕನ್ನಡಿಗರು ನಂಬಬೇಕಂತೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
ಮುಂದುವರಿದು, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ ತಪ್ಪಿಗೆ ಕನ್ನಡಿಗರು ಇನ್ನೂ ಏನೇನು ನೋಡಬೇಕೋ ಆ ದೇವರೇ ಬಲ್ಲ ಎಂದು ಸರ್ಕಾರದ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಅಸಮಾಧಾನದ ಕುರಿತು ಟೀಕಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.