ಆಗ್ರೋ ಕೇಂದ್ರ ಮಾಲಿಕರಿಗೆ ಕೃಷಿ ಇಲಾಖೆ ಕಟ್ಟುನಿಟ್ಟಿನ ಸೂಚನೆ ; ಮೋಸ ಮಾಡಿದರೆ ಕಾನೂನು ಕ್ರಮ-ಪ್ರಶಾಂತ ಸಾಣಿ
ವಿಜಯಪುರ, 05 ಜೂನ್ (ಹಿ.ಸ.) : ಆಂಕರ್ : ರೈತರಿಗೆ ಗುಣಮಟ್ಟದ ಬೀಜ, ರಸಗೊಬ್ಬರ, ಕೀಟನಾಶಕ ಹಾಗೂ ಕೃಷಿ ಪರಿಕರಗಳನ್ನು ಇಲಾಖೆಯ ನಿಯಮಾವಳಿಗಳ ಅನುಸಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ರೈತರಿಗೆ ತಪ್ಪು ಮಾಹಿತಿ ನೀಡಿ ವಂಚನೆ ಮಾಡಬಾರದು ಎಂದು ಸಹಾಯಕ ಕೃಷಿ ನಿರ್ದೇಶಕ ಪ್ರಶಾಂತ ಸಾಣಿ ಆಗ್ರೋ ಕೇಂದ್ರಗಳ ಮಾಲ
ಸಭೆ


ವಿಜಯಪುರ, 05 ಜೂನ್ (ಹಿ.ಸ.) :

ಆಂಕರ್ : ರೈತರಿಗೆ ಗುಣಮಟ್ಟದ ಬೀಜ, ರಸಗೊಬ್ಬರ, ಕೀಟನಾಶಕ ಹಾಗೂ ಕೃಷಿ ಪರಿಕರಗಳನ್ನು ಇಲಾಖೆಯ ನಿಯಮಾವಳಿಗಳ ಅನುಸಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ರೈತರಿಗೆ ತಪ್ಪು ಮಾಹಿತಿ ನೀಡಿ ವಂಚನೆ ಮಾಡಬಾರದು ಎಂದು ಸಹಾಯಕ ಕೃಷಿ ನಿರ್ದೇಶಕ ಪ್ರಶಾಂತ ಸಾಣಿ ಆಗ್ರೋ ಕೇಂದ್ರಗಳ ಮಾಲಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆದ ತಾಲೂಕಿನ ಆಗ್ರೋ ಕೇಂದ್ರಗಳ ಮಾಲಿಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಇಲಾಖೆಯು ರೈತರ ಹಿತದೃಷ್ಟಿಯಿಂದ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅವುಗಳ ಸದುಪಯೋಗ ರೈತರಿಗೆ ಸರಿಯಾಗಿ ತಲುಪುವಂತೆ ಆಗ್ರೋ ಕೇಂದ್ರಗಳ ಮಾಲಿಕರು ಕಾರ್ಯನಿರ್ವಹಿಸಬೇಕು. ಕೃಷಿ ಪರಿಕರಗಳ ವಿತರಣೆಯಲ್ಲಿ ಪಾರದರ್ಶಕತೆ ಹಾಗೂ ಪ್ರಾಮಾಣಿಕತೆ ಕಾಪಾಡುವುದು ಪ್ರತಿಯೊಬ್ಬ ವ್ಯಾಪಾರಿಯ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಮಾತನಾಡಿದ ರೈತ ಮುಖಂಡ ಗಂಗಾಧರ ಚಿಂಚೋಳಿ, ಆಗ್ರೋ ಕೇಂದ್ರದ ಮಾಲಿಕರು ರೈತರಿಗೆ ತಪ್ಪು ಮಾರ್ಗದರ್ಶನ ನೀಡಿ ಲಾಭ ಗಳಿಸುವ ಮನೋಭಾವವನ್ನು ತೊರೆಯಬೇಕು. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಬೇಕು. ಇಂದಿನ ಪರಿಸ್ಥಿತಿಯಲ್ಲಿ ರೈತರು ಹೆಚ್ಚಾಗಿ ಸಾವಯವ ಕೃಷಿಯತ್ತ ಮುಖ ಮಾಡುವುದು ಅಗತ್ಯವಾಗಿದ್ದು, ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಬಹುದು ಎಂದು ಸಲಹೆ ನೀಡಿದರು.

ರೈತ ಮುಖಂಡ ಪೀರು ಕೇರೂರ ಮಾತನಾಡಿ, ಸಿಂದಗಿ ತಾಲೂಕಿನಲ್ಲಿ ಪರವಾನಗಿ ಪಡೆದ ಆಗ್ರೋ ಕೇಂದ್ರಗಳ ಸಂಖ್ಯೆ ಹಾಗೂ ಅವುಗಳ ವಿವರವನ್ನು ಕೃಷಿ ಇಲಾಖೆ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಆಗ್ರೋ ಕೇಂದ್ರಗಳ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು. ರೈತರನ್ನು ವಂಚಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಒಂದು ವೇಳೆ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಎದುರು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಸುರೇಶ ಮಳಲಿ ಮಾತನಾಡಿ, ಆಗ್ರೋ ಕೇಂದ್ರದ ಮಾಲಿಕರು ಬಹುತೇಕ ರೈತ ಕುಟುಂಬಗಳಿಂದ ಬಂದವರಾಗಿದ್ದು, ರೈತರ ಸಂಕಷ್ಟಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. ಆದ್ದರಿಂದ ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಪ್ರಾಮಾಣಿಕವಾಗಿ ರಸಗೊಬ್ಬರ, ಕೀಟನಾಶಕ ಹಾಗೂ ಇತರೆ ಕೃಷಿ ಪರಿಕರಗಳನ್ನು ಮಾರಾಟ ಮಾಡಬೇಕು. ಯಾವುದೇ ಕಾರಣಕ್ಕೂ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಆಗ್ರೋ ಕೇಂದ್ರದ ಮಾಲಿಕರು ರೈತರ ಹಿತಾಸಕ್ತಿಗೆ ಧಕ್ಕೆ ಆಗದಂತೆ ಕಾರ್ಯನಿರ್ವಹಿಸುವುದಾಗಿ ಹಾಗೂ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಅಧಿಕಾರಿಗಳು ಮತ್ತು ರೈತ ಮುಖಂಡರಿಗೆ ಭರವಸೆ ನೀಡಿದರು.

ನಂತರ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಪ್ರಶಾಂತ ಸಾಣಿ, ಸಿಂದಗಿ ತಾಲೂಕಿನಲ್ಲಿ ರಸಗೊಬ್ಬರ ಕೊರತೆ ಉಂಟಾಗದಂತೆ ನೋಡಿಕೊಳ್ಳುವುದು ಕೃಷಿ ಇಲಾಖೆಯ ಜವಾಬ್ದಾರಿಯಾಗಿದೆ. ರೈತರಿಗೆ ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ಹಾಗೂ ಕೃಷಿ ಪರಿಕರಗಳು ಲಭ್ಯವಾಗುವಂತೆ ಇಲಾಖೆ ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತಿದೆ. ರೈತರಿಗೆ ಮೋಸ ಮಾಡುವವರು, ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುವವರು ಅಥವಾ ತಪ್ಪು ಮಾಹಿತಿ ನೀಡಿ ವಂಚಿಸುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ರಾಚಪ್ಪ ವಾರದ, ಬಾಗಪ್ಪಗೌಡ ಪಾಟೀಲ, ಕೃಷಿ ಪರಿಕರ ಮಾರಾಟಗಾರರು, ಪ್ರಗತಿಪರ ರೈತರು, ರೈತ ಮುಖಂಡರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದು, ಕೃಷಿ ಕ್ಷೇತ್ರದ ಸಮಸ್ಯೆಗಳು ಮತ್ತು ಪರಿಹಾರಗಳ ಕುರಿತು ಚರ್ಚಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande