ಬೇಗಂ ತಲಾಬ ಸ್ವಚ್ಛತೆಗೆ ಗಾನಯೋಗಿ ಸಂಘದ ಶ್ರಮಕ್ಕೆ ಮಹಾನಗರ ಪಾಲಿಕೆ ಸಹಕಾರ
ವಿಜಯಪುರ, 05 ಜೂನ್ (ಹಿ.ಸ.) : ಆಂಕರ್ : ವಿಜಯಪುರ ನಗರದ ಐತಿಹಾಸಿಕ ಬೇಗಂ ತಲಾಬ ಕೆರೆಯ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಉದ್ದೇಶದಿಂದ ಗಾನಯೋಗಿ ಸಂಘ ಕೈಗೊಂಡಿದ್ದ ಸ್ವಚ್ಛತಾ ಕಾರ್ಯಕ್ಕೆ ವಿಜಯಪುರ ಮಹಾನಗರ ಪಾಲಿಕೆ ಸ್ಪಂದಿಸಿ ಸಂಗ್ರಹಿಸಲಾದ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಿರುವುದು ಸಾರ್
ಸ್ವಚ್ಛತೆ


ವಿಜಯಪುರ, 05 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ನಗರದ ಐತಿಹಾಸಿಕ ಬೇಗಂ ತಲಾಬ ಕೆರೆಯ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಉದ್ದೇಶದಿಂದ ಗಾನಯೋಗಿ ಸಂಘ ಕೈಗೊಂಡಿದ್ದ ಸ್ವಚ್ಛತಾ ಕಾರ್ಯಕ್ಕೆ ವಿಜಯಪುರ ಮಹಾನಗರ ಪಾಲಿಕೆ ಸ್ಪಂದಿಸಿ ಸಂಗ್ರಹಿಸಲಾದ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಿರುವುದು ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

ಇತ್ತೀಚೆಗೆ ಗಾನಯೋಗಿ ಸಂಘದ ಸದಸ್ಯರು ಬೇಗಂ ತಲಾಬ ಕೆರೆ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡು ಕೆರೆಯ ಸುತ್ತಮುತ್ತ ಹಾಗೂ ನೀರಿನ ತಟದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ವಸ್ತುಗಳು, ಹಳೆಯ ಬಟ್ಟೆಗಳು, ಬಳಕೆಯಲ್ಲದ ವಸ್ತುಗಳು ಸೇರಿದಂತೆ ವಿವಿಧ ರೀತಿಯ ತ್ಯಾಜ್ಯವನ್ನು ಸಂಗ್ರಹಿಸಿ ಒಂದು ಸ್ಥಳದಲ್ಲಿ ರಾಶಿ ಹಾಕಿದ್ದರು. ಈ ಮೂಲಕ ಐತಿಹಾಸಿಕ ಕೆರೆಯ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡುವ ನಿಟ್ಟಿನಲ್ಲಿ ಸಂಘವು ಮಹತ್ವದ ಕಾರ್ಯ ನಿರ್ವಹಿಸಿತ್ತು.

ಸ್ವಚ್ಛತಾ ಕಾರ್ಯದ ಬಳಿಕ ಸಂಗ್ರಹಗೊಂಡಿದ್ದ ತ್ಯಾಜ್ಯವನ್ನು ತೆರವುಗೊಳಿಸುವಂತೆ ಗಾನಯೋಗಿ ಸಂಘ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿತ್ತು. ಸಂಘದ ಮನವಿಗೆ ತ್ವರಿತವಾಗಿ ಸ್ಪಂದಿಸಿದ ವಿಜಯಪುರ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಸಂಗ್ರಹಿಸಲಾಗಿದ್ದ ಎಲ್ಲಾ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸಿ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಸಹಕಾರ ನೀಡಿದರು.

ಈ ಹಿನ್ನೆಲೆಯಲ್ಲಿ ಗಾನಯೋಗಿ ಸಂಘವು ವಿಜಯಪುರ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದೆ. ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳಿಗೆ ಸರ್ಕಾರದ ಇಲಾಖೆಗಳು ಸ್ಪಂದಿಸಿದಾಗ ಸಮಾಜಮುಖಿ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ಸಿಗುತ್ತದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತಾ ಕಾರ್ಯಗಳು ಕೇವಲ ಸರ್ಕಾರದ ಜವಾಬ್ದಾರಿಯಾಗಿರದೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ. ಸಾರ್ವಜನಿಕ ಸಂಘಟನೆಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಸರ್ಕಾರಿ ಇಲಾಖೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಪರಿಸರ ಸಂರಕ್ಷಣೆಯ ಗುರಿಯನ್ನು ಪರಿಣಾಮಕಾರಿಯಾಗಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸಂಘದ ಸದಸ್ಯರು ಅಭಿಪ್ರಾಯಪಟ್ಟರು.

ನಗರದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ಬೇಗಂ ತಲಾಬ ಕೆರೆಯನ್ನು ಸ್ವಚ್ಛ ಮತ್ತು ಸುಂದರವಾಗಿಡುವ ನಿಟ್ಟಿನಲ್ಲಿ ಮುಂದೆಯೂ ವಿವಿಧ ಜಾಗೃತಿ ಮತ್ತು ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಗಾನಯೋಗಿ ಸಂಘ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande